ಕಲಬುರಗಿ : ರಾಯಚೂರು ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ದಲಿತರ ಮೇಲಿನ ದೌರ್ಜನ್ಯ, ಸರಣಿ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿಫಲವಾಗಿವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಆರ್.ಮೋಹನರಾಜ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ದಲಿತರ ಮೇಲಿನ ದೌರ್ಜನ್ಯ, ಯುವತಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆದಿವೆ. ಹಲವು ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಧೋರಣೆಯನ್ನು ಖಂಡಿಸಿ ನವೆಂಬರ್ 8ರಂದು ಸಿಂಧನೂರು ತಾಲೂಕಿನ ತಿಳಗೋಳದಲ್ಲಿ ಬೃಹತ್ ರ‍್ಯಾಲಿ ನಡೆಸಿ, ರಾಯಚೂರು ಜಿಲ್ಲಾದ್ಯಂತ ಬಂದ್ ಆಚರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತ ಮುಖಂಡ ರವೀಂದ್ರನಾಥ ಕಟ್ಟಿ ಮಾತನಾಡಿ, ಗಂಭೀರ ಸ್ವರೂಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ. ಹೀಗಾಗಿ ಎಲ್ಲ ಪ್ರಕರಣಗಳನ್ನು ಕೂಡಲೇ ಸಿಐಡಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ ದಲಿತ ಸಮುದಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವಿಂದ್ರಪ್ಪ, ಪಾಮನ್, ಶಾಮರಾವ್ ಹೇರೂರ, ರಾಚಪ್ಪ ಅಯ್ಯಪ್ಪ, ಮಲ್ಲಿಕಾರ್ಜುನ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor