Kalaburagi | ದುರ್ಗಮ ಪ್ರದೇಶಕ್ಕೆ ತೆರಳಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಸಂಕನೂರ
ಕಲಬುರಗಿ : ಕಮಲಾಪುರ ತಾಲೂಕಿನ ಮಹಾಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಾ ಬಕ್ಸರ್ ಗುಡ್ಡದ ಬಳಿ ವಿಬಿಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿ ಸ್ಥಳಕ್ಕೆ ತೆರಳುವ ರಸ್ತೆ ದುರ್ಗಮವಾಗಿದ್ದ ಹಿನ್ನೆಲೆಯಲ್ಲಿ ಅವರು ಸುಮಾರು ಒಂದು ಕಿಲೋಮೀಟರ್ ದ್ವಿಚಕ್ರ ವಾಹನದಲ್ಲಿ ಸಂಚರಿಸಿ, ಬಳಿಕ ಮತ್ತೊಂದು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಾಮಗಾರಿ ವೀಕ್ಷಿಸಿದರು.
ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟ, ಪ್ರಗತಿ, ಕಾರ್ಮಿಕರ ಹಾಜರಾತಿ ಹಾಗೂ ಅವರಿಗೆ ಕಲ್ಪಿಸಿರುವ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಬಳಿಕ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಕೆಲಸದ ಸ್ವರೂಪ, ವೇತನ ಪಾವತಿ, ಸ್ಥಳದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾರ್ಮಿಕರ ಸುರಕ್ಷತೆ ಮತ್ತು ಮೂಲಭೂತ ಸೌಲಭ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಕಮಲಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪಾಟೀಲ, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಜಗನ್ನಾಥ ರೆಡ್ಡಿ, ಮಹಾಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಯೋಜನೆ ತಾಂತ್ರಿಕ ಸಂಯೋಜಕ ರಾಹುಲ್, ತಾಂತ್ರಿಕ ಸಹಾಯಕ ಮುರುಗೇಂದ್ರ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.