ಕಲಬುರಗಿ | ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ : ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ : ಸಿಎಂ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಕೊಡುಗೆ ನೀಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತಪಡಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ರವಿವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಬಜೆಟ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ ಕಲಬುರಗಿಗೆ100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಸಂಸ್ಥೆ ಮಂಜೂರು ಮಾಡಲಾಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಮಧುಮೇಹ ಆಸ್ಪತ್ರೆ, 50 ಕೋಟಿ ರೂ. ಮೆಗಾ ಡೈರಿ, ಪ್ರಾದೇಶಿಕ ಸಹಕಾರ ಭವನ, ಸರಕಾರಿ ಐಟಿಐ ಮೇಲ್ದರ್ಜೆ ಸೇರಿದಂತೆ ಹಲವು ಯೋಜನೆಗಳನ್ನು ಕಲಬುರಗಿಗೆ ನೀಡಲಾಗಿದ್ದು, ಇನ್ನೂ ಕೆಲವೇ ತಿಂಗಳಲ್ಲಿ ಕಲಬುರಗಿಯಲ್ಲಿ ವಿವಿಧ 4 ಆಸ್ಪತ್ರೆಗಳನ್ನು ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ, ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಳ್ಳಾರಿಯಲ್ಲಿ ಎರಡು ತಿಂಗಳ ಒಳಗಾಗಿ 1 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ,(ಬಜೆಟ್ ನಲ್ಲಿ ಇಲ್ಲದೇ) ಇದ್ದರೂ ಉದ್ಘಾಟನೆ ಮಾಡುತ್ತಿದ್ದೇವೆ. ಜೊತೆಗೆ 500 ಬೆಡ್ ಸಾಮರ್ಥ್ಯದ ಒಂದು ಆಸ್ಪತ್ರೆಯನ್ನು ಕಟ್ಟಲು ನಿರ್ಧರಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ತನ್ನ ಬದ್ಧತೆಯನ್ನು ಪ್ರದರ್ಶನ ಮಾಡಿದ್ದು,ಕಲ್ಯಾಣದ ಎಲ್ಲಾ ಭಾಗಗಳಲ್ಲಿ ಕ್ಯಾನ್ಸರ್ ಡಿಟೆಶನ್ ಕೇಂದ್ರ ಸ್ಥಾಪನೆ ಮಾಡಲಾಗುವುದು. ಇನ್ನೂ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ವರ್ಗಾವಣೆಗಳನ್ನು ಇನ್ನುಮುಂದೆ ಕೌನ್ಸಿಲಿಂಗ್ ಮೂಲಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜರ್ಮನ್ ಲಾಂಗ್ವೇಜ್ ನಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಪರೀಕ್ಷಾ ತರಬೇತಿ ಕೇಂದ್ರ ನೀಡಲು ನಿರ್ಧರಿಸಲಾಗಿದೆ. ಬಾಗಲಕೋಟೆ ಹಾಗೂ ಕೋಲಾರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಪಿಪಿ ಮೆಡಿಕಲ್ ಕಾಲೇಜನ್ನು ರಾಯಚೂರಿನಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು
ಸುದ್ದಿಗೋಷ್ಠಿಯಲ್ಲಿ ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್, ರಾಜಗೋಪಾಲ್ ರೆಡ್ಡಿ, ಗುರುಶಾಂತ್ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.