ಕಲಬುರಗಿ | ಮನೆಗಳ್ಳತನ ಪ್ರಕರಣ; ಆರೋಪಿಯ ಬಂಧನ
ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 3 ಮನೆಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ಬೈಕ್ ಸೇರಿದಂತೆ 13.41 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬಿಲಾಲಬಾದ್ ಕಾಲೋನಿಯ ನಿವಾಸಿ ಮುಹಮ್ಮದ್ ಆರಿಫ್ (50) ಬಂಧಿತ ಆರೋಪಿಯಾಗಿದ್ದು, ಈತ ತಾನು ಮಾಡಿಕೊಂಡಿರುವ ಸಾಲವನ್ನು ತೀರಿಸಲು ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ.
ವಿವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖಾ ತಂಡ ರಚಿಸಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸಿ, ಆತನಿಂದ 13 ಲಕ್ಷ ರೂ. ಮೌಲ್ಯದ 100 ಗ್ರಾಂ ಬಂಗಾರ, 16,000 ರೂ. ಮೌಲ್ಯದ 200 ಗ್ರಾಂ ಬೆಳ್ಳಿ ಆಭರಣಗಳ ಜೊತೆಗೆ 25 ಸಾವಿರ ರೂ. ಮೌಲ್ಯದ ಬೈಕ್ ವೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
3 ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಿಗೆ ಶ್ಲಾಘಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ್, ಸುಶೀಲ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.