Kalaburagi | ಕರಜಗಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಪ್ರಾಂಶುಪಾಲ, ವಾರ್ಡನ್ ಅಮಾನತು
ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಹಾಗೂ ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ. (ಕೆಎಎಸ್) ಅಮಾನತು ಆದೇಶ ಹೊರಡಿಸಿದ್ದು, ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ಹಾಗೂ ಆಹಾರದ ಗುಣಮಟ್ಟ ಕಾಪಾಡುವುದು ಸಂಬಂಧಿತ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿತ್ತು. ಆದರೆ ನಿರ್ಲಕ್ಷ್ಯದಿಂದ 55 ವಿದ್ಯಾರ್ಥಿಗಳು ಏಕಕಾಲದಲ್ಲಿ ಅಸ್ವಸ್ಥರಾಗುವಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಾಥಮಿಕ ಪರಿಶೀಲನೆಯಲ್ಲಿಯೇ ಕರ್ತವ್ಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.
ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ–1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ವಿನಿಯಮಗಳು–2025ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.