ಕಲಬುರಗಿ | ಅನುಮೋದನೆಗೊಂಡ ಕಾಮಗಾರಿಗಳ ಆರಂಭಕ್ಕೆ ಡಿಸಿ ಬಿ.ಫೌಝಿಯಾ ತರನ್ನುಮ್ ಸೂಚನೆ
ಕಲಬುರಗಿ: ಜಿಲ್ಲೆಯಾದ್ಯಾಂತ ಜಿಲ್ಲಾ ಖನಿಜ ನಿಧಿ ಅನುದಾನದಡಿ ಈಗಾಗಲೇ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಫೆ.10ರೊಳಗೆ ಆರಂಭಿಸುವಂತೆ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು.
ಶುಕ್ರವಾರ ಈ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಒಂದು ವೇಳೆ ನಿಗದಿತ ಅವಧಿಯಲ್ಲಿ ಕೆಲಸ ಕಾಮಗಾರಿಗಳು ಪ್ರಾರಂಭ ಮಾಡದಿದ್ದರೆ ಅಂತಹ ಕಾಮಗಾರಿಗಳನ್ನು ಕೈಬಿಟ್ಟು, ಉಳಿತಾಯದ ಅನುದಾನದಡಿ ಅವಶ್ಯವಿರುವ ಇತರೆ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಆರಂಭಕ್ಕೆ ವಿಳಂಬ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇನ್ನು ಈಗಾಗಲೇ ಕ್ರಿಯಾ ಯೋಜನೆಯಡಿ ಅನುಮೋದನೆಗೊಂಡಿರುವ ಕಾಮಗಾರಿಗಳನ್ನು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಲು 3 ದಿನದೊಳಗೆ ಈ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅನುಷ್ಠಾನ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಭಾಗವಹಿಸಿದ್ದರು.