Kalaburagi | ಓಬಿಸಿ ಸಮುದಾಯಗಳಲ್ಲೂ ಒಳಮೀಸಲಾತಿ ಜಾರಿಗೆ ತರಲಿ: ದೇವಿಂದ್ರ ದೇಸಾಯಿ ಕಲ್ಲೂರ
ಕಲಬುರಗಿ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಹಿಂದುಳಿದ ವರ್ಗಗಳ (ಓಬಿಸಿ) ಮೀಸಲಾತಿ ವ್ಯವಸ್ಥೆಯನ್ನೂ ಸಮಗ್ರವಾಗಿ ಮರುಪರಿಶೀಲಿಸಿ, ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಓಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರಬೇಕು ಎಂದು ವಿಶ್ವಕರ್ಮ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೀಸಲಾತಿಯ ಮೂಲ ಉದ್ದೇಶ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶ ಕಲ್ಪಿಸುವುದಾಗಿದೆ. ಆದರೆ ಹಿಂದುಳಿದ ವರ್ಗಗಳಲ್ಲಿನ ಕೆಲವೇ ಪ್ರಬಲ ಸಮುದಾಯಗಳು ಮೀಸಲಾತಿಯ ಹೆಚ್ಚಿನ ಸೌಲಭ್ಯಗಳನ್ನು ಪಡೆಯುತ್ತಿದ್ದು, ಅನೇಕ ಅತ್ಯಂತ ಹಿಂದುಳಿದ ಸಮುದಾಯಗಳು ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಇನ್ನೂ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ನಡೆಸಬೇಕು. ಅತ್ಯಂತ ಹಿಂದುಳಿದ ಸಮುದಾಯಗಳನ್ನು ಗುರುತಿಸಿ, ಅವರಿಗೆ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ದೊರೆಯುವಂತೆ ಓಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರುವ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.