Kalaburagi | ಅಂತಾರಾಜ್ಯ ಮನೆಗಳ್ಳನ ಬಂಧನ; 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಅಶೋಕನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ
ಕಲಬುರಗಿ: ಮನೆಗಳಿಗೆ ಬೀಗ ಹಾಕಿರುವುದನ್ನು ಗಮನಿಸಿ ಹಗಲು ವೇಳೆಯಲ್ಲೇ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಅಂತಾರಾಜ್ಯ ಮನೆಗಳ್ಳನನ್ನು ಅಶೋಕನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು, ಎರಡು ಮನೆಕಳ್ಳತನ ಪ್ರಕರಣಗಳನ್ನು ಭೇದಿಸಿ ಸುಮಾರು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
ಬಂಧಿತನನ್ನು ತೆಲಂಗಾಣದ ವರಂಗಲ್ ಮೂಲದ 46 ವರ್ಷದ ಸೈಯದ್ ಹಮೀದ್ ಅಲಿ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಹೈದರಾಬಾದ್‌ನಲ್ಲಿ ವಾಸವಾಗಿದ್ದ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಯುಕ್ತರು ಮಾಹಿತಿ ನೀಡಿದರು.
2025ರ ಮೇ 29ರಂದು ಮನೆಯವರು ಕೆಲಸದ ನಿಮಿತ್ತ ಹೊರಗೆ ತೆರಳಿದ್ದ ವೇಳೆ ಆರೋಪಿ ಮನೆಯ ಬೀಗ ಮುರಿದು ಒಳನುಗ್ಗಿ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಹಾಗೂ ನಗದು ಹಣ ಕಳವು ಮಾಡಿದ್ದ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ 2025ರ ಒಂದು ಹಾಗೂ 2026ರ ಒಂದು ಸೇರಿ ಅಶೋಕನಗರ ಠಾಣೆ ವ್ಯಾಪ್ತಿಯ ಎರಡು ಮನೆಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಆರೋಪಿಯಿಂದ 117 ಗ್ರಾಂ ತೂಕದ ಚಿನ್ನಾಭರಣ ಸೇರಿದಂತೆ ಅಂದಾಜು 16 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
ಕಾರ್ಯಾಚರಣೆಯಲ್ಲಿ ಅಶೋಕನಗರ ಠಾಣೆ, ಸ್ಟೇಷನ್ ಬಜಾರ್ ಠಾಣೆ ಹಾಗೂ ಸಿಡಿಆರ್ ಸೆಲ್ ಸಿಬ್ಬಂದಿ ಭಾಗವಹಿಸಿದ್ದು, ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಐದು ರಾಜ್ಯಗಳಲ್ಲಿ ಕಳ್ಳತನ ಜಾಲ :
ವಿಚಾರಣೆ ವೇಳೆ ಆರೋಪಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಹಾಗೂ ಗುಜರಾತ್ ರಾಜ್ಯಗಳಲ್ಲಿ ಮನೆಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ರೈಲಿನ ಮೂಲಕ ವಿವಿಧ ನಗರಗಳಿಗೆ ತೆರಳಿ, ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಹಗಲು ವೇಳೆಯಲ್ಲೇ ಕಳ್ಳತನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
2025ರ ಒಂದು ಹಾಗೂ 2026ರ ಒಂದು ಸೇರಿ ಎರಡು ಮನೆಕಳ್ಳತನ ಪ್ರಕರಣಗಳನ್ನು ಭೇದಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಾರ್ವಜನಿಕರು ಮನೆಗೆ ಬೀಗ ಹಾಕಿ ಹೊರಗೆ ತೆರಳುವ ಸಂದರ್ಭದಲ್ಲಿ 112 ಸಹಾಯವಾಣಿ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ ಗಸ್ತು ವ್ಯವಸ್ಥೆ ಕಲ್ಪಿಸಲಾಗುವುದು. ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು.
-ಡಾ. ಶರಣಪ್ಪ ಎಸ್.ಡಿ.