Kalaburagi | ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿನ ಗೊಂದಲ ಖಂಡಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಕ್ರೋಶ

Update: 2026-08-02 23:25 IST

ಕಲಬುರಗಿ: ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಬ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ವಿಳಂಬ ಹಾಗೂ ಆಡಳಿತಾತ್ಮಕ ಗೊಂದಲವನ್ನು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಸಮಿತಿಯ ಜಿಲ್ಲಾ ಸಂಚಾಲಕ ರಮೇಶ ದೇವಕರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ಉತ್ತರ ಪತ್ರಿಕೆಗಳನ್ನು ನಿಗದಿತ ಸಮಯಕ್ಕಿಂತ ತಡವಾಗಿ ವಿತರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದಲ್ಲದೆ, ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಉತ್ತರ ಪತ್ರಿಕೆಗಳ ಸಂಖ್ಯೆಗಳು ಪರಸ್ಪರ ಹೊಂದಿಕೆಯಾಗದಿರುವುದು ಪರೀಕ್ಷಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಕುರಿತು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಗೊಂದಲದಿಂದ ಅಭ್ಯರ್ಥಿಗಳು ಆತಂಕಕ್ಕೊಳಗಾಗಿ ತಮ್ಮ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪೊಲೀಸ್ ನೇಮಕಾತಿಯಂತಹ ಮಹತ್ವದ ಪರೀಕ್ಷೆಗಳಲ್ಲಿ ಇಂತಹ ನಿರ್ಲಕ್ಷ್ಯ ಮತ್ತು ಲೋಪಗಳು ಅಭ್ಯರ್ಥಿಗಳ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸರ್ಕಾರ ಕೂಡಲೇ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಒತ್ತಾಯಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News