Kalaburagi | ಸೈಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ‘ಕಲರವ-2026’ ಕಾರ್ಯಕ್ರಮ
ಕಲಬುರಗಿ : ನಗರದ ಸೈಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಲರವ-2026’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಡಾ. ಫಿರೋಜ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಡಾ. ಉಮರ್ ಫಾರೂಕ್ ಮೀರನಾಯಕ ಅವರು ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕನ್ನಡ ಶಾಲು ಹೊದಿಸಿ ಸ್ವಾಗತಿಸಿದರು.
ನಂತರ ಮಾತನಾಡಿದ ಡಾ. ಉಮರ್ ಫಾರೂಕ್ ಮೀರನಾಯಕ ಅವರು, ಕರ್ನಾಟಕ ಏಕೀಕರಣ ಚಳವಳಿಯ ಇತಿಹಾಸವನ್ನು ಸ್ಮರಿಸಿದರು. ಕನ್ನಡ ಭಾಷೆ, ಸಾಹಿತ್ಯ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಮುಸ್ಲಿಂ ಸಮುದಾಯ ನೀಡಿರುವ ಮಹತ್ವದ ಕೊಡುಗೆಗಳನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ. ಫಿರೋಜ್ ಅವರು, ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಇದೇ ವೇಳೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ರಾಜಾ ಸಾಬ್ ಅವರ ಸೇವೆಯನ್ನು ಸ್ಮರಿಸಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಡಾ. ಉಮರ್ ಫಾರೂಕ್ ಮೀರನಾಯಕ ಅವರ ನಿರ್ದೇಶನದಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ‘ಕನ್ನಡ ಬಳಸಿ, ಕನ್ನಡ ಉಳಿಸಿ’ ಎಂಬ ಸಂದೇಶ ಸಾರುವ ನಾಟಕವನ್ನು ಪ್ರದರ್ಶಿಸಿ ಗಮನ ಸೆಳೆದರು.
ಕಾಲೇಜಿನ ಎನ್‌ಎಸ್‌ಎಸ್ ತಂಡ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಎನ್‌ಎಸ್‌ಎಸ್ ತಂಡದ ಉಪನ್ಯಾಸಕ ನಾಗರಾಜ ಹಿರೇಗೌಡರ್ ಸೇರಿದಂತೆ ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.