ಕಲಬುರಗಿ: ರೈತರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ 101 ಸಾಧಕರಿಗೆ ಕರ್ನಾಟಕ ಪ್ರಗತಿಪರ ರೈತಾಪಿ ಸಂಘದ ವತಿಯಿಂದ ‘ಕರ್ನಾಟಕದ ಅರ್ಜುನ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

‘ರೈತನಿದ್ದರೆ ಜಗವೆಲ್ಲ, ರೈತನಿಲ್ಲದಿದ್ದರೆ ಜಗವಿಲ್ಲ’ ಎಂಬ ಆಶಯದೊಂದಿಗೆ ರೈತ ಜನಜಾಗೃತಿ ಅಂಗವಾಗಿ 2026ನೇ ಸಾಲಿನ ರಾಜ್ಯಮಟ್ಟದ ಕಾರ್ಯಕ್ರಮವನ್ನು ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅಪ್ಪಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಡಕೋಳ ಮಡಿವಾಳೇಶ್ವರ ಮಹಾಮಠದ ಡಾ. ರುದ್ರಮುನಿ ಶಿವಾಚಾರ್ಯರು, ಯೋಗೇಶ್ವರಿ ಮಾತಾಜಿ, ಗಂಗಾಧರ ಮಹಾಸ್ವಾಮಿಗಳು, ಶಾರದಾಮಾತೆ ಹಾಗೂ ಶಾಂತಮ್ಮ ತಾಯಿ ಮಾತೋಶ್ರೀ ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ರೈತ ಬಾವುಟ ಪ್ರದರ್ಶನ ಹಾಗೂ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವೂ ನಡೆಯಿತು.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಬಿಜೆಪಿ ಮುಖಂಡ ಅಂಬಾರಾಯ ಅಪ್ಪಗಿ, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ರಾಜು ತೆಗ್ಗಳ್ಳಿ, ಕೆವಿಕೆ ರದ್ದೇವಾಡಿಯ ಡಾ. ಪಿ. ವಾಸುದೇವ ನಾಯಕ ಸೇರಿದಂತೆ ಉದ್ಯಮಿಗಳು, ವೈದ್ಯರು, ಪತ್ರಕರ್ತರು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಕರ್ನಾಟಕ ಪ್ರಗತಿಪರ ರೈತಾಪಿ ಸಂಘದ ಸಂಸ್ಥಾಪಕ ಅಧ್ಯಕ್ಷ ಮೋಹನ ಎನ್. ಪಾಟೀಲ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅವಣ್ಣಗೌಡ ಎನ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ ಮರತೂರಕರ್ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಹಾಗೂ ಆತ್ಮೀಯ ಬಳಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ