×
Ad

ಕಲಬುರಗಿ | ಕಸಾಪದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Update: 2025-06-15 20:14 IST

ಕಲಬುರಗಿ: ನಮ್ಮ ಕನ್ನಡ ನಾಡು-ನುಡಿಗೆ ತನ್ನದೇ ಆದ ಸೌಂದರ್ಯವಿದೆ. ಕನ್ನಡದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಮಾಜಿ ಮಹಾಪೌರರಾದ ಶರಣಕುಮಾರ ಮೋದಿ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗರದ ಕನ್ನಡ ಭವನದಲ್ಲಿ ರವಿವಾರ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. 

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮಹಾಪೌರರಾದ ಶರಣಕುಮಾರ ಮೋದಿ, ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೊಡುವ ಮೂಲಕ ಅವರಲ್ಲಿ ಮಾತೃಭಾಷಾಭಿಮಾನ ಬೆಳೆಸುತ್ತಿದೆ. ಈ ಕೆಲಸ ನಿರಂತರವಾಗಿ ನಡೆಯಲಿ ಎಂದು ಹೇಳಿದರು.

ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚನ್ನು ಹಚ್ಚುವ ಕಾರ್ಯ ಪರಿಷತ್ತು ಮಾಡುತ್ತಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡದ ಬಗೆಗಿನ ಅನೇಕ ವಿಚಾರಗಳನ್ನು ಇಂಥ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ತಿಳಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಆಪ್ತ ಕಾರ್ಯದರ್ಶಿ ನಾಗೇಂದ್ರಪ್ಪ ಅವರಾದಿ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಅನುಸಂಧಾನ ವಲಯದ ಸಂಯೋಜಕಿ ಸವಿತಾ ಬಿ.ಕೆ, ಕೃಷಿ ಪರಿಕರಗಳ ಉದ್ದಿಮೆದಾರ ದಯಾನಂದ ದೇವರಮನಿ ಮಾತನಾಡಿದರು.

ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ವಿಶಾಲಾಕ್ಷಿ ಮಾಯಣ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಕೋಶಾಧ್ಯಕ್ಷ ಕುಪೇಂದ್ರ ಬರಗಾಲಿ, ಪ್ರಮುಖರಾದ ಶರಣಕುಮಾರ ಹಾಗರಗುಂಡಗಿ, ಈರಣ್ಣ ಸೋನಾರ, ಕವಿತಾ ಕವಳೆ, ವಿಜಯಕುಮಾರ ಹಾಬಾನೂರ್, ಸುನೀತಾ ಮಾಳಗೆ, ಜಿಲ್ಲಾ ಕಸಾಪದ ಶಿವರಾಜ ಅಂಡಗಿ, ರವೀಂದ್ರಕುಮಾರ ಭಂಟನಳ್ಳಿ, ಗಣೇಶ ಚಿನ್ನಾಕಾರ, ರಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಧರ್ಮರಾಜ ಜವಳಿ, ರಮೇಶ ಬಡಿಗೇರ, ಎಂ.ಎನ್. ಸುಗಂಧಿ, ಮಲ್ಲಿನಾಥ ಸಂಗಶೆಟ್ಟಿ, ದಿನೇಶ ಮದಕರಿ ಸೇರಿ ಅನೇಕರು ಭಾಗವಹಿಸಿದ್ದರು.

ಈ ವೇಳೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News