ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ: ಶಿವ ಅಷ್ಟಗಿ
ಕಲಬುರಗಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶಿವ ಅಷ್ಠಗಿ, ಕರ್ನಾಟಕ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾವಿರಾರು ಉದ್ಯೋಗಾಕಾಂಕ್ಷಿಗಳು ಈ ಮೊದಲು ಕೂಡ ಪ್ರತಿಭಟನೆ ಮಾಡಿದ್ದಾರೆ. ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನಾನಿರತ ಆಕಾಂಕ್ಷಿಗಳ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ಲಾಠಿಚಾರ್ಜ್ ಮಾಡಿಸಿ ಹೋರಾಟಗಾರರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಉದ್ಯೋಗ ಭರ್ತಿ ಮಾಡಿಕೊಳ್ಳುವ ಸಂಸ್ಥೆಗಳು ಭ್ರಷ್ಟಾಚಾರ, ಅಕ್ರಮ ನೇಮಕಾತಿಯಲ್ಲಿ ತೊಡಗಿಕೊಂಡಿವೆ. ಇದರಿಂದ ಸಾವಿರಾರು ಪ್ರತಿಭಾನ್ವಿತ ಮತ್ತು ಬಡ ಉದ್ಯೋಗಾಕಾಂಕ್ಷಿಗಳ ಬದುಕಿಗೆ ಕೊಳ್ಳಿ ಇಡುವ ಕೆಲಸ ರಾಜ್ಯ ಸರಕಾರ ಮಾಡುತ್ತಿದೆ. ಒಂದು ಕಡೆ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಮತ್ತು ವಿಳಂಬ ಫಲಿತಾಂಶದಿಂದ ತತ್ತರಿಸಿ ಹೋಗಿದ್ದಾರೆ, ಇನ್ನೊಂದು ಕಡೆ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.