Kalaburagi | ಮಕ್ಕಳ ಕೈಯಲ್ಲಿ ಪುಸ್ತಕಗಳಿರಲಿ, ಕೆಲಸದ ಆಯುಧಗಳಲ್ಲ: ಸಂತೋಷ ಪಾಟೀಲ
ವಿಭಾಗೀಯ ಮಟ್ಟದ ‘ಬಾಲಬಾಂಧವ್ಯ’ ಕಾರ್ಯಾಗಾರಕ್ಕೆ ಚಾಲನೆ
ಕಲಬುರಗಿ, ಜು.14: ಮಕ್ಕಳ ಕೈಯಲ್ಲಿ ಪುಸ್ತಕಗಳಿರಬೇಕೇ ಹೊರತು ಕೆಲಸದ ಆಯುಧಗಳಲ್ಲ. ಮಕ್ಕಳ ಹಕ್ಕುಗಳ ರಕ್ಷಣೆ, ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ನಿರ್ಮೂಲನೆ ಮತ್ತು ಶಿಕ್ಷಣದ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಪಾಟೀಲ ಹೇಳಿದರು.
ನಗರದ ಕೇಸರಟಗಿಯಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ (ANSSIRD) ಪ್ರಾದೇಶಿಕ ಕೇಂದ್ರದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ 12ರಿಂದ 18 ವರ್ಷದ ಮಕ್ಕಳಿಗಾಗಿ ಆಯೋಜಿಸಿದ್ದ ನಾಲ್ಕು ದಿನಗಳ ವಿಭಾಗೀಯ ಮಟ್ಟದ ‘ಬಾಲಬಾಂಧವ್ಯ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಬದುಕುವ, ಶಿಕ್ಷಣ ಪಡೆಯುವ, ಅಭಿವೃದ್ಧಿ ಹೊಂದುವ ಹಾಗೂ ಸಮಾಜದಲ್ಲಿ ಪಾಲ್ಗೊಳ್ಳುವ ಹಕ್ಕುಗಳಿದ್ದು, ಅವುಗಳ ರಕ್ಷಣೆ ಸಮಾಜದ ಜವಾಬ್ದಾರಿಯಾಗಿದೆ. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಭಿಕ್ಷಾಟನೆ ಸೇರಿದಂತೆ ಮಕ್ಕಳ ಮೇಲಿನ ಎಲ್ಲ ರೀತಿಯ ಶೋಷಣೆಯನ್ನು ನಿರ್ಮೂಲನೆ ಮಾಡಲು ಜಾಗೃತಿ ಅಗತ್ಯ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಮಾತನಾಡಿ, ಮಕ್ಕಳ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಯಲ್ಲಿ ಪೋಷಕರು, ಶಿಕ್ಷಕರು ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಸಂಸ್ಕಾರ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅಗತ್ಯವಾಗಿದ್ದು, ಕಲೆ, ಸಂಗೀತ, ನಾಟಕ, ಕ್ರೀಡೆ ಹಾಗೂ ತಂತ್ರಜ್ಞಾನ ಆಧಾರಿತ ಚಟುವಟಿಕೆಗಳು ಪ್ರತಿಭೆ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿಯ ಉಪಾಧ್ಯಕ್ಷ ಅನಿಲಕುಮಾರ ಜಮಾದಾರ್ ಮಾತನಾಡಿ, ಮಕ್ಕಳ ಮೊಬೈಲ್ ಬಳಕೆಗೆ ಮಿತಿ ವಿಧಿಸುವುದು ಪೋಷಕರ ಜವಾಬ್ದಾರಿ. ಅಂಕಗಳಿಗಿಂತ ಸಂಸ್ಕಾರ, ಮೌಲ್ಯಗಳು ಹಾಗೂ ಜೀವನ ಕೌಶಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಶ್ವಾರಾಧ್ಯ ಕೆ. ಇಜೇರಿ, ಜಿಲ್ಲಾ ಮಟ್ಟದ ಬಾಲ ವಿಕಾಸ ಅಕಾಡೆಮಿ ಅನುಷ್ಠಾನ ಸಮಿತಿಯ ಸದಸ್ಯ ಎ.ಕೆ. ರಾಮೇಶ್ವರ ಸೇರಿದಂತೆ ಹಲವು ಗಣ್ಯರು ಮಕ್ಕಳ ಪ್ರತಿಭೆ ಗುರುತಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಅಗತ್ಯವನ್ನು ಒತ್ತಿಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಶಿವಶರಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಸಾಂಸ್ಕೃತಿಕ ಅರಿವು, ದೇಸಿ ಆಟಗಳು, ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಮಕ್ಕಳು ಭಾಗವಹಿಸಿದ್ದು, ನಾಟಕ, ಸಾಂಸ್ಕೃತಿಕ ಚಟುವಟಿಕೆಗಳು, ನಾಯಕತ್ವ ತರಬೇತಿ ಹಾಗೂ ಮಕ್ಕಳ ಹಕ್ಕುಗಳ ಕುರಿತು ವಿಶೇಷ ಅಧಿವೇಶನಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಢವಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಪ್ರತಿನಿಧಿಗಳು, ಪೋಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.