Kalaburagi | ಲಾರಿ-ಕಾರು ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಕಲಬುರಗಿ : ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅತಿವೇಗದಲ್ಲಿ ಬರುತ್ತಿದ್ದ ಲಾರಿಯು ಕಾರಿಗೆ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದರೂ, ಪೊಲೀಸರು ಶೀಘ್ರವೇ ಸಂಚಾರವನ್ನು ಸುಗಮಗೊಳಿಸಿದರು.
ಘಟನೆಯ ಕುರಿತು ಟ್ರಾಫಿಕ್-1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.