×
Ad

ಕಲಬುರಗಿ | ಯೋಗವನ್ನು ದಿನಚರಿಯ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

Update: 2026-06-21 19:13 IST

ಕಲಬುರಗಿ: ಯೋಗ ದಿನಾಚರಣೆಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಯೋಗದ ಮೌಲ್ಯಗಳನ್ನು ಅರಿತು ಪ್ರತಿದಿನದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಸಾರ್ವಜನಿಕರಿಗೆ ಕರೆ ನೀಡಿದರು.

ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದೊಂದಿಗೆ ತಮ್ಮ ಸಂಬಂಧ ಹಲವು ವರ್ಷಗಳದ್ದಾಗಿದ್ದು, ಕಳೆದ ಏಳು ವರ್ಷಗಳಿಂದ ಪ್ರತಿದಿನ ಸೂರ್ಯ ನಮಸ್ಕಾರದೊಂದಿಗೆ ದಿನಚರಿಯನ್ನು ಆರಂಭಿಸುತ್ತಿರುವುದಾಗಿ ತಿಳಿಸಿದ ಅವರು, ಯೋಗವು ತಮ್ಮ ಜೀವನಶೈಲಿಯ ಭಾಗವಾಗಿದೆ ಎಂದು ಹೇಳಿದರು.

ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಕೆಲಸದ ಒತ್ತಡ, ಆತಂಕ ಮತ್ತು ಸವಾಲುಗಳ ನಡುವೆಯೂ ಮನೋಬಲ, ಆತ್ಮಸ್ಥೈರ್ಯ ಹಾಗೂ ತಾಳ್ಮೆಯನ್ನು ಬೆಳೆಸಲು ಯೋಗ ಸಹಕಾರಿಯಾಗಿದೆ. ಸಕಾರಾತ್ಮಕ ಚಿಂತನೆ ಮತ್ತು ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಯೋಗ ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಯೋಗದ ಮಹತ್ವ ಇಂದು ಸ್ಥಳೀಯ ಮಟ್ಟದಿಂದ ಅಂತರರಾಷ್ಟ್ರೀಯ ಮಟ್ಟದವರೆಗೆ ವ್ಯಾಪಿಸಿದೆ. ಪ್ರತಿದಿನ 30 ರಿಂದ 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವುದಲ್ಲದೆ, ಜೀವನದ ಗುಣಮಟ್ಟ ಸುಧಾರಣೆಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ (ಪ್ರಭಾರ) ಡಾ. ಕೆ.ಬಿ. ಬಬಲಾದಿ ಅತಿಥಿಗಳನ್ನು ಪುಸ್ತಕ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಯೋಗ ಶಿಷ್ಟಾಚಾರದ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಶಾಲು, ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೊಘ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸಂಗಮೇಶ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪುರ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ರಾಜಶೇಖರ ಗೋನಾಯಕ ಹಾಗೂ ಆಯುರ್ವೇದ ಮಂಡಳಿ ರಾಷ್ಟ್ರೀಯ ಆಯೋಗ, ನವದೆಹಲಿಯ ಅಧ್ಯಕ್ಷ ಡಾ. ಅಲ್ಲಮಪ್ರಭು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಯೋಗ ತರಬೇತುದಾರರಾದ ನಾಗರಾಜ ಹಾಗೂ ಶಶಿಕಲಾ ಅವರು ಯೋಗದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಆರ್.ಜೆ. ವಾಣಿ ಕಾರ್ಯಕ್ರಮ ನಿರೂಪಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News