ಕಲಬುರಗಿ | ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಸುಲಿಗೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಕಲಬುರಗಿ: ಇಲ್ಲಿನ ಬ್ರಹ್ಮಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬರಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ ನಗರದ ಬಾಪೂನಗರದ ಮಾಂಗರವಾಡಿಗಲ್ಲಿಯ ನಿವಾಸಿ ವಿಶು ಮೊಹನ್ ಉಪಾಧ್ಯ (21) ರೋಹಿತ್(25) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಉಧ್ಯಾನವನದಲ್ಲಿ ಅಕ್ಟೋಬರ್ 28ರಂದು ರಾತ್ರಿ 10 ಗಂಟೆ ಸುಮಾರಿಗೆ ಲಕ್ಷ್ಮೀಕಾಂತ ಚಕ್ಕೆ ಎಂಬವರು ನಿಂತುಕೊಂಡಿದ್ದಾಗ ಅಪರಿಚಿತ ಇಬ್ಬರು ವ್ಯಕ್ತಿಗಳು ಮಚ್ಚಿನಿಂದ ಹಲ್ಲೆ ನಡೆಸಿ, ಅವರ ಕೊರಳಲ್ಲಿದ್ದ 10 ಗ್ರಾಂ ಚಿನ್ನದ ಸರ ಮತ್ತು ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು.
ಈ ಕುರಿತು ಲಕ್ಷ್ಮೀಕಾಂತ್ ಅವರು ಬ್ರಹ್ಮಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು 1 ಲಕ್ಷ ರೂ. ಮೌಲ್ಯದ 10 ಗ್ರಾಂ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಒಂದು ಮಚ್ಚನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.