ಕಲಬುರಗಿ: ನಗರದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಸ್ಟಿಕ್ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ರವಿವಾರ ರಾತ್ರಿ ಬೆಳಕಿಗೆ ಬಂದಿದೆ.
ಮೃತರನ್ನು ಕಲಬುರಗಿ ನಗರದ ಬ್ರಹ್ಮಪುರದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಬಳಿ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಕಳೆದ ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಸಿದ್ದಲಿಂಗ ಸಾವಳಗಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ. ರವಿವಾರ ಸಂಜೆ ನಗರದ ಹೊರವಲಯದ ಹೋಟೆಲ್‌ವೊಂದರ ಸಮೀಪ ಕಾರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿದ್ದಲಿಂಗ ಅವರನ್ನು ಅವರ ಗೆಳೆಯರು ಕಾರಿನಲ್ಲಿ ಕರೆದೊಯ್ದು ಸ್ಟಿಕ್ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯ ಬಳಿಕ ಮೃತದೇಹವನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್. ಡಿ, ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಐ ನಟರಾಜ್ ಲಾಡೆ ಮತ್ತಿತ್ತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.