×
Ad

ಕಲಬುರಗಿ | ಬೆಳೆಹಾನಿ : ಲೋಕಸಭಾ ಸದಸ್ಯ, ಶಾಸಕರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

Update: 2025-09-01 19:13 IST

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸೋಮವಾರ ನಡೆದ ಕಲಬುರಗಿ ಜಿಲ್ಲಾ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಆಗಿರುವ ಬೆಳೆಹಾನಿ ಹಾಗೂ ಸೆ.17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಯಲ್ಲಿ ಸಚಿವರು ಶಾಸಕರೊಂದಿಗೆ ಚರ್ಚಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಆಗಸ್ಟ್‌ ತಿಂಗಳ ಅಂತ್ಯದವರೆಗೆ 699 ಮಿ.ಮಿ ಮಳೆಯಾಗಿದ್ದು, ವಾಡಿಕೆಗಿಂತಲೂ ಶೇ.49ರಷ್ಟು ಹೆಚ್ಚು ಮಳೆಯಾಗಿದ್ದು, ಸಾಮಾನ್ಯವಾಗಿ ಈ ಅವಧಿಯಲ್ಲಿ 468 ಮಿ.ಮಿ ಮಳೆ ಆಗಬೇಕಿತ್ತು, ಜುಲೈ ಹಾಗೂ ಆಗಸ್ಟ್‌ ಮಾಹೆಯಲ್ಲಿ ಹೆಚ್ಚು ಮಳೆ ಆಗಿರುವುದರಿಂದ ಬೆಳೆಹಾನಿಯಾಗಿದ್ದು, ಜಿಲ್ಲಾಧಿಕಾರಿಗಳು ಜಂಟಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಕೈ ಸೇರಲಿದ್ದು, ನಂತರ ಪರಿಹಾರ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.

ಬೆಳೆ ನಷ್ಟದ ಬಗ್ಗೆ ವರದಿ ಬಂದ ನಂತರ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದೆಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ವಿವಿಧ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದು, ಈ ಕುರಿತು ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್‌ಸಿಂಗ್‌, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್‌, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಎಂ.ವೈ.ಪಾಟೀಲ್‌, ಕನೀಝ್‌ ಫಾತಿಮಾ ಪಾಲ್ಗೊಂಡಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News