ಕಲಬುರಗಿ: ರಾಜ್ಯದ ರೈತರ ಬೆಳೆಹಾನಿ ಕುರಿತು ಮಳೆಗಾಲದ ಅಧಿವೇಶನದಲ್ಲಿ ಚರ್ಚಿಸಲು ವಿರೋಧ ಪಕ್ಷದವರಿಗೆ ಮನವಿ ಮಾಡಿರುವ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ನಡೆ ರೈತಪರ ಕಾಳಜಿಗಿಂತ ರಾಜಕೀಯ ಭೂಟಾಟಿಕೆಯಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಟೀಕಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಬಗ್ಗೆ ಕಾಳಜಿ ವ್ಯಕ್ತಪಡಿಸುವ ಶಾಸಕರಿಗೆ ತಮ್ಮ ಕ್ಷೇತ್ರದ ರೈತರ ಸಮಸ್ಯೆಗಳ ಬಗ್ಗೆ ಏಕೆ ಕಾಳಜಿ ಇಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ರೈತರು ಬರಗಾಲ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷದ ಬೆಳೆ ವಿಮೆ ಹಣವೇ ಅನೇಕ ರೈತರಿಗೆ ಸಮರ್ಪಕವಾಗಿ ತಲುಪಿಲ್ಲ. ಕ್ಷೇತ್ರದ ರೈತರಿಗೆ ಸರ್ಕಾರದಿಂದ ಯಾವ ರೀತಿಯ ನೆರವು ದೊರಕುವಂತೆ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಅವಧಿಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಬಡ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಕೊಳವೆಬಾವಿಗಳನ್ನು ಕೊರೆಸಿ, ಎಷ್ಟು ರೈತರಿಗೆ ಮೋಟಾರ್ ಅಳವಡಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ ಎಂಬುದನ್ನು ಶಾಸಕರು ಬಹಿರಂಗಪಡಿಸಬೇಕು ಎಂದು ರೇವೂರ ಒತ್ತಾಯಿಸಿದರು.

ತಮ್ಮ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ರೈತರ ಅನುಕೂಲಕ್ಕಾಗಿ ಬೆಣ್ಣೆತೊರಾ ಬ್ಯಾರೇಜ್‌ನಿಂದ ವಿವಿಧ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಸುಮಾರು 200 ಕೋಟಿ ರೂ. ಅನುದಾನದಲ್ಲಿ ಆರಂಭವಾದ ಈ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದನ್ನು ಶಾಸಕರು ಕ್ಷೇತ್ರದ ರೈತರಿಗೆ ತಿಳಿಸಬೇಕು ಎಂದು ಹೇಳಿದರು.

ದರಿಯಾಪುರ–ಕೋಟನೂರ ಪ್ರದೇಶದಲ್ಲಿ ಅಟಲ್‌ಜಿ ಲೇಔಟ್‌ ನಿರ್ಮಾಣಕ್ಕಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಸರ್ಕಾರದಿಂದ ಇದುವರೆಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬುದನ್ನೂ ಶಾಸಕರು ಸ್ಪಷ್ಟಪಡಿಸಬೇಕು ಎಂದು ರೇವೂರ ಆಗ್ರಹಿಸಿದರು.

ಲಭ್ಯವಿರುವ ಸರ್ಕಾರಿ ಮಾಹಿತಿಯ ಪ್ರಕಾರ ಸುಮಾರು 26 ರೈತರಿಂದ 150 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಅವರಿಗೆ ಸುಮಾರು 293 ಕೋಟಿ ರೂ. ಪರಿಹಾರ ನೀಡಬೇಕಿದೆ. ಈ ಪೈಕಿ ಇದುವರೆಗೆ ಎಷ್ಟು ಮೊತ್ತವನ್ನು ಪಾವತಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಜಪ್ತಿಗೂ ಆದೇಶವಾಗಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಕ್ಷೇತ್ರದ ರೈತರು ಕಳೆದುಕೊಂಡ ಜಮೀನಿಗೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿರುವ ಶಾಸಕರು ಸದನದಲ್ಲಿ ರಾಜ್ಯದ ರೈತರ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ರೇವೂರ ವ್ಯಂಗ್ಯವಾಡಿದರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಗರೋತ್ಥಾನ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಸುಮಾರು 9 ತಿಂಗಳು ಕಳೆದರೂ ಕಾಮಗಾರಿಗಳು ಆರಂಭವಾಗಿಲ್ಲ. ಕಾಮಗಾರಿಗಳು ಆರಂಭವಾಗದಿರುವುದಕ್ಕೆ ಕಾರಣವೇನು ಎಂಬುದನ್ನು ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

ರೈತರ ಹಾಗೂ ನಗರದ ಜನರ ಸಮಸ್ಯೆಗಳನ್ನು ಮೊದಲು ಪರಿಹರಿಸುವತ್ತ ಶಾಸಕರು ಗಮನಹರಿಸಬೇಕು. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ರೈತಪರ ಹೇಳಿಕೆ ನೀಡುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಶಾಲ ದರ್ಗಿ, ದಯಾಘನ್ ಧಾರವಾಡಕರ್, ರಾಜು ವಾಡೇಕರ್, ಶಿವಯೋಗಿ ನಾಗನಹಳ್ಳಿ, ಅವಿನಾಶ್ ಕುಲಕರ್ಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor