Kalaburagi | ಶರಣಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಗ್ರಂಥಾಲಯ ಜ್ಞಾನ, ಚಿಂತನೆ ಹಾಗೂ ಜೀವನಪರ್ಯಂತ ಕಲಿಕೆಯ ಕೇಂದ್ರ: ಡಾ.ಪ್ರದೀಪಕುಮಾರ
ಕಲಬುರಗಿ: ಗ್ರಂಥಾಲಯವು ಕೇವಲ ಪುಸ್ತಕಗಳ ಸಂಗ್ರಹಾಲಯವಲ್ಲ, ಜ್ಞಾನ, ಚಿಂತನೆ ಹಾಗೂ ಜೀವನಪರ್ಯಂತ ಕಲಿಕೆಯ ಕೇಂದ್ರವಾಗಿದೆ ಎಂದು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಗ್ರಂಥಪಾಲಕ ಡಾ. ಪ್ರದೀಪಕುಮಾರ ಡಿ. ಹೇಳಿದರು.
ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಭಾರತೀಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ 134ನೇ ಜನ್ಮದಿನದ ಅಂಗವಾಗಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಇ-ಪುಸ್ತಕಗಳು, ಇ-ಜರ್ನಲ್‌ಗಳು, ಡೇಟಾಬೇಸ್‌ಗಳು ಹಾಗೂ ವಿವಿಧ ಡಿಜಿಟಲ್ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆನ್‌ಲೈನ್ ಶೈಕ್ಷಣಿಕ ಸಂಪನ್ಮೂಲಗಳ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ದಶರಥ ಮೇತ್ರೆ ಮಾತನಾಡಿ, ವಿದ್ಯಾರ್ಥಿಗಳು ಉಲ್ಲೇಖ ಗ್ರಂಥಗಳನ್ನು ಓದುವ, ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಖರೀದಿಸಿ ಓದುವ ಮತ್ತು ನಿಯಮಿತವಾಗಿ ಗ್ರಂಥಾಲಯಕ್ಕೆ ಭೇಟಿ ನೀಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ವ್ಯವಹಾರ ಮತ್ತು ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಿಸಿದ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಓದುವ ಮೂಲಕ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚಿಸಿಕೊಳ್ಳಬೇಕು. ಇದರಿಂದ ಸ್ವತಂತ್ರ ಚಿಂತನಾ ಸಾಮರ್ಥ್ಯ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸಕ್ರಿಯ ಓದು ಹಾಗೂ ಸ್ವತಂತ್ರ ಚಿಂತನೆಯ ಅಭ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಕಾಲೇಜಿನ ಗ್ರಂಥಪಾಲಕಿ ಡಾ.ದೈವತಾಬಾಯಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.