Kalaburagi | ಎನ್ನೆಸ್ಸೆಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ: ಡಾ. ರಾಜಶೇಖರ ಬೀರನಳ್ಳಿ
ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಕಲಬುರಗಿ: ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಕೇವಲ ಸಮಾಜ ಸೇವೆಯ ಕಾರ್ಯಕ್ರಮವಲ್ಲ; ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ಜವಾಬ್ದಾರಿ, ನಾಯಕತ್ವ ಹಾಗೂ ದೇಶಭಕ್ತಿಯನ್ನು ಬೆಳೆಸುವ ಮಹತ್ವದ ಚಳವಳಿಯಾಗಿದೆ ಎಂದು ಹೈಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಜಶೇಖರ ಬೀರನಳ್ಳಿ ಹೇಳಿದರು.
ನಗರದ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಆಯೋಜಿಸಿದ್ದ ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ನಾನಲ್ಲ, ನೀನು” ಎಂಬ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಎನ್ನೆಸ್ಸೆಸ್‌ನ ಪ್ರಮುಖ ಉದ್ದೇಶವಾಗಿದೆ. ಸಮಾಜದಿಂದ ಪಡೆಯುವುದಕ್ಕಿಂತ ಸಮಾಜಕ್ಕೆ ನಾವು ಏನು ಕೊಡುಗೆ ನೀಡಬಹುದು ಎಂಬ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಿಸುವುದೇ ಯೋಜನೆಯ ಆಶಯವಾಗಿದೆ ಎಂದು ತಿಳಿಸಿದರು.
ಎನ್ನೆಸ್ಸೆಸ್ ವಿದ್ಯಾರ್ಥಿಗಳನ್ನು ಕೇವಲ ಉತ್ತಮ ವಿದ್ಯಾರ್ಥಿಗಳನ್ನಾಗಿ ಮಾತ್ರವಲ್ಲ, ಜವಾಬ್ದಾರಿಯುತ ಮತ್ತು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಮಾಡುತ್ತಿದೆ. ಗಿಡ ನೆಡುವುದು, ಗ್ರಾಮ ಸ್ವಚ್ಛತೆ, ರಕ್ತದಾನ ಜಾಗೃತಿ, ಆರೋಗ್ಯ ಶಿಬಿರ ಹಾಗೂ ಸಾಕ್ಷರತಾ ಕಾರ್ಯಕ್ರಮಗಳಂತಹ ವಿವಿಧ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ನೆಸ್ಸೆಸ್ ‘ಅ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಪ್ರಾಣೇಶ ಅವರು ಸಂಸ್ಥಾಪನಾ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ‘ಬ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಶಂಕ್ರೆಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.