Kalaburagi | ಜಫರಾಬಾದ್‌ನಲ್ಲಿ ಎನ್ನೆಸ್ಸೆಸ್‌ ವಿಶೇಷ ಶಿಬಿರ: ಸ್ವಚ್ಛತೆ, ಪರಿಸರ ಸಂರಕ್ಷಣೆಯ ಜಾಗೃತಿ

Update: 2026-07-27 17:18 IST

ಕಲಬುರಗಿ: ಕೃಷಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌) ಘಟಕದ ವತಿಯಿಂದ ಪ್ರಥಮ ವರ್ಷದ ಬಿ.ಎಸ್ಸಿ. (ಆನರ್ಸ್) ಕೃಷಿ ವಿದ್ಯಾರ್ಥಿಗಳಿಗಾಗಿ ನಗರದ ಹೊರವಲಯದ ಜಫರಾಬಾದ್ ಗ್ರಾಮದಲ್ಲಿ ಒಂದು ವಾರದ ವಿಶೇಷ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಹೆಚ್. ಸಿ. ಸೌಮ್ಯ ಹಾಗೂ ಡಾ. ಗಜೇಂದ್ರ ಸಿ. ವಿ. ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ಗ್ರಾಮಾಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.

ಶಿಬಿರದ ಅಂಗವಾಗಿ ಸ್ವಚ್ಛತೆ, ಅರಣ್ಯ ಸಂರಕ್ಷಣೆ, ಹೆಣ್ಣು ಮಕ್ಕಳ ರಕ್ಷಣೆ, ನಶಾ ಮುಕ್ತ ಭಾರತ, ರಸ್ತೆ ಸುರಕ್ಷತೆ ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮಹತ್ವ ಕುರಿತು ಜಾಥಾ ನಡೆಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಅಗತ್ಯತೆಯ ಬಗ್ಗೆಯೂ ಮಾಹಿತಿ ನೀಡಲಾಯಿತು.

ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ (ಕ್ವಿಜ್) ಸ್ಪರ್ಧೆಯನ್ನು ಡಾ. ಹಸನಖಾನ್ ಅವರ ನೇತೃತ್ವದಲ್ಲಿ ನಡೆಸಿ ವಿಜೇತರಿಗೆ ಅಭಿನಂದಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಗುರುಶಾಂತಪ್ಪ ಸಾವಳಗಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಸತೀಶಕುಮಾರ ಕಾಳೆ, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಗ್ರಾಮಾಭಿವೃದ್ಧಿ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮೆಚ್ಚುಗೆ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News