ಕಲಬುರಗಿ: ಆಳಂದ ಪಟ್ಟಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಊಟ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ರೊಟ್ಟಿ, ಅನ್ನ ಹಾಗೂ ಸಾಂಬರ್ ಸೇವಿಸಿದ ಬಳಿಕ ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ. ಆಹಾರ ಸೇವಿಸಿದ ಬಳಿಕವೇ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಆಹಾರ ವಿಷಬಾಧೆ (ಫುಡ್ ಪಾಯಿಸನಿಂಗ್) ಶಂಕೆ ವ್ಯಕ್ತವಾಗಿದೆ.

ವಸತಿ ನಿಲಯಕ್ಕೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿ ಸರಬರಾಜಾಗಿರುವುದರಿಂದಲೇ ಘಟನೆ ಸಂಭವಿಸಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.

ಘಟನೆ ತಿಳಿದು ತಾಲೂಕಿನ ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮಿ ಹೋಳ್ಕರ್, ವಾರ್ಡನ್ ಸೇರಿದಂತೆ ಇತರೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಸತಿ ನಿಲಯದ ಆಹಾರ ವ್ಯವಸ್ಥೆ ಹಾಗೂ ಅಡುಗೆ ಸಾಮಗ್ರಿಗಳನ್ನು ಪರಿಶೀಲಿಸಿದರು.

ಬಳಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡ ಅಧಿಕಾರಿಗಳು, ಘಟನೆಗೆ ಕಾರಣವೇನು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor