ಕಲಬುರಗಿ: ಮಾದಕ ವಸ್ತುಗಳ ಅಕ್ರಮ ಮಾರಾಟ ಹಾಗೂ ಸೇವನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಗುರುವಾರ ಗಾಂಜಾ ಪೆಡ್ಲರ್‌ಗಳ ಪರೇಡ್ ನಡೆಸಲಾಯಿತು. ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಮತ್ತೆ ತೊಡಗದಂತೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಖಡಕ್ ಎಚ್ಚರಿಕೆ ನೀಡಿದರು.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಅವುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪರೇಡ್ ಆಯೋಜಿಸಲಾಗಿತ್ತು. ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆಯ 10 ಪೊಲೀಸ್ ಠಾಣೆಗಳಿಂದ ಒಟ್ಟು 67 ಗಾಂಜಾ ಪೆಡ್ಲರ್‌ಗಳನ್ನು ಪರೇಡ್‌ಗೆ ಹಾಜರುಪಡಿಸಲಾಗಿತ್ತು.

ಈ ಸಂದರ್ಭದಲ್ಲಿ 29 ಗಾಂಜಾ ಪೆಡ್ಲರ್‌ಗಳ ವಿರುದ್ಧ ಪಿಎಆರ್ ಕ್ರಮ ಕೈಗೊಳ್ಳಲಾಗಿದ್ದು, 19 ಮಂದಿಯಿಂದ ಬಾಂಡ್ ಓವರ್ ಮಾಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪರೇಡ್‌ನಲ್ಲಿ ಗಾಂಜಾ ಪೆಡ್ಲರ್‌ಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟದಂತಹ ಅಕ್ರಮ ಚಟುವಟಿಕೆಗಳಿಂದ ದೂರವಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತೆ ಸಲಹೆ ನೀಡಿದರು.

ಮಾದಕ ವಸ್ತುಗಳ ಮಾರಾಟವು ವ್ಯಕ್ತಿಯ ಜೀವನದ ಮೇಲೆ ಮಾತ್ರವಲ್ಲದೆ ಕುಟುಂಬ ಹಾಗೂ ಇಡೀ ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಇಂತಹ ಚಟುವಟಿಕೆಗಳಿಂದ ಸಂಪೂರ್ಣವಾಗಿ ದೂರವಿದ್ದು, ಆರೋಗ್ಯಕರ ಹಾಗೂ ಸುಂದರ ಜೀವನ ನಡೆಸಬೇಕು. ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಮಾದಕ ವಸ್ತುಗಳ ಮಾರಾಟದಲ್ಲಿ ಮತ್ತೆ ತೊಡಗಿಕೊಂಡರೆ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಪಿ ಶಾಲೂ, ಎಸಿಪಿಗಳು, ವಿವಿಧ ಪೊಲೀಸ್ ಠಾಣೆಗಳ ಪಿಐಗಳು ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor