ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಮಿಕ್ಕೂಳಿದ ವೃಂದದ 1,421 ಹಾಗೂ ಸ್ಥಳೀಯ ವೃಂದದ 179 ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆ ಸೆ.6ರಂದು ಕಲಬುರಗಿ ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಯು ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಸುವುದರೊಂದಿಗೆ ನಕಲು ತಡೆಯುವ ಉದ್ದೇಶದಿಂದ ಎಲ್ಲ 15 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಕಲಂ 163ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ–1963ರ ಕಲಂ 35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ, ಯಾವುದೇ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲೂಟೂತ್, ವೈರ್‌ಲೆಸ್ ಸೆಟ್ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೆ, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿರುವ ಎಲ್ಲ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಹಾಗೂ ಪುಸ್ತಕ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor