ಕಲಬುರಗಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾ ಸೇವಾ ಅಭಿಯಾನ’ದಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತುರ್ತು ಕ್ರಮ ಕೈಗೊಳ್ಳುವ ಉದ್ದೇಶದಿಂದ ಕಲಬುರಗಿ ತಾಲೂಕಿನ ಫರಹತಾಬಾದ್ ಹೋಬಳಿಯ ಶರಣಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜನಸ್ಪಂದನ ಸಭೆ ನಡೆಯಿತು.

ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು 52 ಅಹವಾಲುಗಳು ಹಾಗೂ ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.

ಇವುಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 37, ಪಂಚಾಯತ್ ರಾಜ್ ಇಲಾಖೆಯ 10, ಆಹಾರ ಇಲಾಖೆಯ ಎರಡು, ವಿದ್ಯುತ್ ಸರಬರಾಜು ಇಲಾಖೆಯ ಒಂದು, ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಒಂದು ಹಾಗೂ ಶಿಶುಪಾಲನಾ ಅಭಿವೃದ್ಧಿ ಇಲಾಖೆಯ ಒಂದು ಅರ್ಜಿ ಸೇರಿವೆ.

ಸ್ವೀಕೃತವಾದ ಒಟ್ಟು ಅರ್ಜಿಗಳ ಪೈಕಿ ಕಂದಾಯ ಇಲಾಖೆಗೆ ಸಂಬಂಧಿಸಿದ 15 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ ಅಹವಾಲುಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದು, ನಿಯಮಾನುಸಾರ ಪರಿಶೀಲಿಸಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಮಾತನಾಡಿ, ಪ್ರಸ್ತುತ ತೀವ್ರ ಬರಗಾಲದ ಪರಿಸ್ಥಿತಿ ಇರುವುದರಿಂದ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅನಗತ್ಯವಾಗಿ ನೀರು ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಯಾವುದೇ ವಿಳಂಬವಿಲ್ಲದೆ ಇತ್ಯರ್ಥಪಡಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿದ್ದು ಪಾಟೀಲ, ತಹಶೀಲ್ದಾರ್ ಕೆ. ಆನಂದಶೀಲ್ ಸೇರಿದಂತೆ ಕಲಬುರಗಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor