Kalaburagi | ಆಳಂದ ತಾಲೂಕಿನ ಮುನ್ನೊಳಿಯಲ್ಲಿ ‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ
ಜನರ ಬಳಿಗೆ ತೆರಳಿ ಸಮಸ್ಯೆ ಪರಿಹರಿಸುವುದು ಅಭಿಯಾನದ ಉದ್ದೇಶ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್
ಕಲಬುರಗಿ : ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವೇ ಜನರ ಬಳಿಗೆ ತೆರಳಿ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವುದು ‘ಪ್ರಜಾಸೇವೆ’ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.
ಆಳಂದ ತಾಲೂಕಿನ ಮುನ್ನೊಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವೆ’ ಅಭಿಯಾನಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜನಸ್ನೇಹಿ, ಪಾರದರ್ಶಕ ಮತ್ತು ತ್ವರಿತ ಆಡಳಿತ ನೀಡುವ ಆಶಯದಿಂದ ಈ ಅಭಿಯಾನ ರೂಪಿಸಲಾಗಿದೆ. ‘ಜನಸ್ಪಂದನ’ ಹಾಗೂ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಗಳ ಮುಂದುವರಿದ ಭಾಗವಾಗಿ ‘ಪ್ರಜಾಸೇವೆ’ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಸಾಧ್ಯವಾದಷ್ಟು ತಕ್ಷಣ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಅಭಿಯಾನದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಗೂ ಯುನಿಕ್ ಐಡೆಂಟಿಟಿ ಕೋಡ್ ನೀಡಲಾಗುತ್ತದೆ. ಅರ್ಜಿಗಳನ್ನು ಐಪಿಜಿಆರ್‌ಎಸ್ (IPGRS) ತಂತ್ರಾಂಶದಲ್ಲಿ ದಾಖಲಿಸಲಾಗುತ್ತಿದ್ದು, ಅವುಗಳ ವಿಲೇವಾರಿಯನ್ನು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ, ಮುಖ್ಯಮಂತ್ರಿಗಳ ಕಚೇರಿಯಿಂದಲೂ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಸಭೆಗಳಿಗೆ ಮಾತ್ರ ಸೀಮಿತವಾಗದೆ ಅಧಿಕಾರಿಗಳು ಶಾಲೆಗಳು, ಆಸ್ಪತ್ರೆಗಳು, ಕೃಷಿ ಜಮೀನುಗಳು ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರೈತರ ಮೇವಿನ ಕೊರತೆ, ಜಮೀನು ಸರ್ವೇ, ಆರೋಗ್ಯ ಸೇವೆಗಳು ಸೇರಿದಂತೆ ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರುಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಂಡು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
‘ಪ್ರಜಾಸೇವೆ’ ಅಭಿಯಾನದ ಅಂಗವಾಗಿ ವಿವಿಧ ಇಲಾಖೆಗಳ 11 ಸ್ಟಾಲ್‌ಗಳನ್ನು ಸ್ಥಾಪಿಸಿ ಸಾರ್ವಜನಿಕರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಲೀಡ್ ಬ್ಯಾಂಕ್, ಎಸ್‌ಐಆರ್, ವಿಬಿ-ಜಿ-ರಾಮ್‌ಜಿ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ, ಆಹಾರ, ಜೆಸ್ಕಾಂ, ಯುವನಿಧಿ ಹಾಗೂ ಸಹಕಾರ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಎಸ್. ಸಂಕನೂರ ಮಾತನಾಡಿ, ಸಾರ್ವಜನಿಕರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಕಾರ್ಯಕ್ರಮವನ್ನು ಕೇವಲ ಔಪಚಾರಿಕತೆಗೆ ಸೀಮಿತಗೊಳಿಸದೆ, ಸಾರ್ವಜನಿಕರಿಗೆ ನೈಜ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ವಿವಿಧ ಕುಂದುಕೊರತೆಗಳ ಕುರಿತು ಮನವಿಗಳನ್ನು ಸ್ವೀಕರಿಸಲಾಯಿತು. ಒಟ್ಟು 52 ಅರ್ಜಿಗಳು ಸಲ್ಲಿಕೆಯಾಗಿದ್ದು, ತಕ್ಷಣ ಪರಿಹರಿಸಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಆಳಂದ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಪುತ್ರಪ್ಪ ಪಾಟೀಲ್, ಎಸ್‌ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ರೀತಿಕಾ ವರ್ಮಾ, ಸಾಮಾಜಿಕ ಉಪ ನಿರ್ದೇಶಕ ಸಾಗರ ತಾವಡೆ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಢವಳಗಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸಂತೋಷ ಇನಾಂದಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ, ಆಳಂದ ತಹಶೀಲ್ದಾರ್ ಅಣ್ಣಾರಾವ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.