×
Ad

ಕಲಬುರಗಿ | 77ನೇ ಗಣರಾಜ್ಯೋತ್ಸವ ನಿಮಿತ್ತ ಪೂರ್ವಭಾವಿ ಸಭೆ

ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೂಚನೆ

Update: 2026-01-16 20:35 IST

ಕಲಬುರಗಿ : ಜಿಲ್ಲೆಯಾದ್ಯಂತ ಜ.26 ರಂದು 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಮಾತನಾಡಿ, ಜ.26 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಿ.ಎ.ಆರ್.ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಜರುಗುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು. ಶಿಷ್ಠಾಚಾರದಂತೆ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಬೇಕು ಮತ್ತು ದಿನಾಚರಣೆಗೆ ಸಕಲ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಪರೇಡ್ ಮೈದಾನದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿಗಳು ಭಾಗವಹಿಸುವುದರಿಂದ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗೆ ಸಿಹಿ ಪೊಟ್ಟಣ ವಿತರಿಸಬೇಕು. ಗಣ್ಯರು ಆಗಮಿಸುವುದರಿಂದ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಗಣರಾಜ್ಯೋತ್ಸವ ಅಂಗವಾಗಿ ಕಲಬುರಗಿ ನಗರದ ಅಪ್ಪ ಕೆರೆ ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಪುಷ್ಪ ಪ್ರದರ್ಶನ ಆಯೋಜಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಇನಾಂದಾರ ಅವರಿಗೆ ಸೂಚನೆ ನೀಡಿದರು.

ಎನ್.ಸಿ.ಸಿ., ಸ್ಕೌಟ್ ಮತ್ತು ಗೈಡ್ಸ್, ಭಾರತ ಸೇವಾದಳ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಇನ್ನು ವಿವಿಧ ಇಲಾಖೆಯ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸರ್ಕಾರಿ ಸೌಲಭ್ಯ ವಿತರಣೆ ಮಾಡುವುದಾದರೆ ಶನಿವಾರ ಸಂಜೆಯೊಳಗೆ ಇಲಾಖೆಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕೆಂದು ಸೂಚಿಸಲಾಯಿತು.

ಸ್ಥಬ್ದಚಿತ್ರ ಪ್ರದರ್ಶನ ಯೋಜಿಸಬೇಕು :

ಕೃಷಿ, ತೋಟಗಾರಿಕೆ, ಆರೋಗ್ಯ, ಜೆಸ್ಕಾಂ, ಕೆ.ಕೆ.ಆರ್.ಟಿ.ಸಿ., ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿಯಿಂದ ವಿವಿಧ ವಿಷಯಾಧಾರಿತ ಆಕರ್ಷಕ ಸ್ಥಬ್ದಚಿತ್ರಗಳನ್ನು ಆಯೋಜಿಸಬೇಕೆಂದು ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಡಿ.ಸಿ. ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್, ಸಾಂಸ್ಕೃತಿಕ ನಾಯಕ ಬಸವಣ್ಣ, ಸಂಗೊಳ್ಳಿ ರಾಯಣ್ಣ, ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗಳನ್ನು ಸ್ವಚ್ಚಗೊಳಿಸಿ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು.

ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಮಾತನಾಡಿದರು.

ಸಭೆಯಲ್ಲಿ ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಮಹಾನಗರ ಪಾಲಿಕೆ ಉಪ ಆಯುಕ್ತೆ (ಆಡಳಿತ) ಪ್ರಮೀಳಾ ಎಂ.ಕೆ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News