Kalaburagi | ಆ.28ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಿದ್ಧತೆ

Update: 2026-08-14 18:07 IST

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆ.28ರಂದು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಪ್ರಭು ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

ಆ.28ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಿವಪ್ರಭು ಹಿರೇಮಠ ಮನವಿ ಮಾಡಿದರು.

ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಜಯಂತಿ ಆಚರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ನುಲಿಯ ಚಂದಯ್ಯ ಅವರ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಕುರಿತು ಉಪನ್ಯಾಸ ಆಯೋಜಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಶ್ರೀಮಂತ ಎಲ್. ಜಾಧವ್ ಅವರನ್ನು ಜಯಂತಿ ಸಮಿತಿ ಅಧ್ಯಕ್ಷರನ್ನಾಗಿ ಹಾಗೂ ಶಿವರಂಜನ್ ಸತ್ಯಂಪೇಟ ಅವರನ್ನು ಉಪನ್ಯಾಸಕರನ್ನಾಗಿ ಆಯ್ಕೆ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಮಾತನಾಡಿ, ಶಿಷ್ಟಾಚಾರದಂತೆ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಮಾಜದ ಮುಖಂಡರಾದ ಹಣಮಂತ ಭಜಂತ್ರಿ, ವಿಷ್ಣು ಭಜಂತ್ರಿ, ರಮೇಶ್ ಜಾಧವ್, ಸುನಿಲ್ ಮಾನ್ಪಡೆ, ಮಂಜುಳಾ ಭಜಂತ್ರಿ, ಮಹಾದೇವಿ ಭಜಂತ್ರಿ, ಭೀಮರಾವ ಭಜಂತ್ರಿ, ಸಿದ್ದಲಿಂಗ, ಜಗನ್ನಾಥ, ಶಿವಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News