Kalaburagi | ಗುಣಮಟ್ಟದ ಆಹಾರ, ಶಿಕ್ಷಣ, ಮೂಲಸೌಕರ್ಯಕ್ಕೆ ಆದ್ಯತೆ ನೀಡಿ : ರಾಹುಲ್ ಎಸ್.ಸಂಕನೂರ
ಶಾಲೆ, ಅಂಗನವಾಡಿ, ಜೆಜೆಎಂ ಕಾಮಗಾರಿ, ಕೆರೆ ಹೂಳೆತ್ತುವಿಕೆ ಸೇರಿ ವಿವಿಧ ಕಾಮಗಾರಿಗಳ ಪರಿಶೀಲನೆ
ಕಲಬುರಗಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರ ಅವರು ಸೆಪ್ಟೆಂಬರ್ 8ರಂದು ಆಳಂದ ತಾಲೂಕಿಗೆ ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವುದರ ಜೊತೆಗೆ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ವೀಕ್ಷಿಸಿದರು.
ಮೊದಲಿಗೆ ಕಡಗಂಚಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಓವರ್‌ಹೆಡ್ ಟ್ಯಾಂಕ್ (ಒಎಚ್‌ಟಿ), ಕೆಕೆಆರ್‌ಡಿಬಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಮುದಾಯ ಶೌಚಾಲಯ ಹಾಗೂ ತೆರೆದ ಬಾವಿಯನ್ನು ಪರಿಶೀಲಿಸಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಧನ್ನೂರ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿದ್ದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ವಿಬಿಜಿ ರಾಮ್‌ಜಿ ಯೋಜನೆಯಡಿ ಗ್ರಾಮದಲ್ಲಿಯೇ ವರ್ಷಕ್ಕೆ 125 ದಿನಗಳ ಉದ್ಯೋಗ ದೊರೆಯುತ್ತಿದ್ದು, ಪ್ರತಿದಿನ 382 ರೂ. ಕೂಲಿ ನೀಡಲಾಗುತ್ತಿದೆ. ವಲಸೆ ಹೋಗದೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕರಿಗೆ ಸಲಹೆ ನೀಡಿದರು.
ಧನ್ನೂರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮಕ್ಕಳಿಗೆ ವಿತರಿಸಲಾಗುತ್ತಿರುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿ, ನಿಗದಿತ ಪ್ರಮಾಣದಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಸಿಬ್ಬಂದಿಗೆ ಸೂಚಿಸಿದರು.
ನಂತರ ದುತ್ತರಗಾವ್ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿಇಒ, ಮಕ್ಕಳೊಂದಿಗೆ ಪಾಠವನ್ನೂ ನಡೆಸಿದರು. ಸರ್ಕಾರದಿಂದ ದೊರೆಯುತ್ತಿರುವ ಶೈಕ್ಷಣಿಕ ಸೌಲಭ್ಯಗಳು, ಶಾಲೆಯ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟವನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿದಿನ ಪೌಷ್ಟಿಕ ಮತ್ತು ಗುಣಮಟ್ಟದ ಆಹಾರ ಒದಗಿಸಬೇಕು. ಶಾಲಾ ಆವರಣವನ್ನು ಸ್ವಚ್ಛವಾಗಿಟ್ಟುಕೊಂಡು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರು.
ಭೂಸನೂರ ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ (ಎಸ್‌ಡಬ್ಲ್ಯೂಎಂ) ಶೆಡ್‌ಗೆ ಭೇಟಿ ನೀಡಿ ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ನಂತರ ಮಾಡ್ಯಾಳ ಗ್ರಾಮದಲ್ಲಿ ನಿರ್ಮಾಣಗೊಂಡ ಸಮುದಾಯ ಶೌಚಾಲಯ ಹಾಗೂ ತಡಕಲ್ ಗ್ರಾಮದಲ್ಲಿರುವ ಎಫ್‌ಎಚ್‌ಟಿಪಿ ಘಟಕವನ್ನು ವೀಕ್ಷಿಸಿ ಕಾಮಗಾರಿಗಳ ಪ್ರಗತಿ ಮತ್ತು ಬಳಕೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರಿಶೀಲನೆ ವೇಳೆ ಆಳಂದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.