ಕಲಬುರಗಿ: ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ-2, ರದ್ದೇವಾಡಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಜೇವರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆಹಾರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಪಿ. ವಾಸುದೇವ್ ನಾಯ್ಕ್ ಮಾತನಾಡಿ, ಗುಣಮಟ್ಟದ ಆಹಾರ, ಪೌಷ್ಟಿಕ ಭದ್ರತೆ, ಮಹಿಳೆಯರ ಆರೋಗ್ಯ ಹಾಗೂ ಸುಸ್ಥಿರ ಆಹಾರ ಉತ್ಪಾದನೆಯ ಮಹತ್ವವನ್ನು ವಿವರಿಸಿದರು.

ಕೇವಲ ಆಹಾರ ಉತ್ಪಾದನೆಯನ್ನು ಹೆಚ್ಚಿಸುವುದಷ್ಟೇ ಮುಖ್ಯವಲ್ಲ. ಗುಣಮಟ್ಟದ, ಸುರಕ್ಷಿತ ಹಾಗೂ ಪೌಷ್ಟಿಕಾಂಶಯುಕ್ತ ಆಹಾರವನ್ನು ಉತ್ಪಾದಿಸಿ ಸೇವಿಸುವುದು ಅಗತ್ಯವಾಗಿದೆ. ಮನೆ ಅಂಗಳದಲ್ಲಿ ಪೌಷ್ಟಿಕ ತೋಟಗಳನ್ನು ಬೆಳೆಸುವ ಮೂಲಕ ರಾಸಾಯನಿಕ ಮುಕ್ತ ಆಹಾರ ಉತ್ಪಾದನೆಗೆ ಆದ್ಯತೆ ನೀಡಬೇಕು. ಇದರಿಂದ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ (ಮಣ್ಣು ವಿಜ್ಞಾನ) ಫರ್ಜಾನಾ ಎಂ. ಕೋರಬು ಮಾತನಾಡಿ, ದೈನಂದಿನ ಆಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ಸಿರಿಧಾನ್ಯಗಳು ಪೌಷ್ಟಿಕ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ಆರೋಗ್ಯಕರ ಆಹಾರ ಉತ್ಪಾದನೆಗೆ ಮಣ್ಣಿನ ಆರೋಗ್ಯವೇ ಮೂಲಾಧಾರವಾಗಿದೆ. ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ವಿಷಮುಕ್ತ ಆಹಾರ ಉತ್ಪಾದನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಸಂತ ಬಿ. ಗೌಡ, ಮಾಲ್ತೇಶ, ತಾಲೂಕು ಕ್ಷೇತ್ರ ಯೋಜನಾಧಿಕಾರಿ, ತಾಲೂಕು ಕೃಷಿ ಮೇಲ್ವಿಚಾರಕ ರಾಜಹುಲಿ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು. 40ಕ್ಕೂ ಹೆಚ್ಚು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor