Kalaburagi | ಕೈದಿಗಳ ಪರಾರಿ ಪ್ರಕರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಅವ್ವಣ್ಣಾ ಮ್ಯಾಕೇರಿ ಆಗ್ರಹ
ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೂ ಒತ್ತಾಯ
ಕಲಬುರಗಿ : ನಗರದ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಅವ್ವಣ್ಣಾ ಮ್ಯಾಕೇರಿ ಆಗ್ರಹಿಸಿದ್ದಾರೆ.
ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಜುಲೈ 14ರಂದು ಬೆಳಗಿನ ಜಾವ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದ ಅವರು, ಇತ್ತೀಚೆಗೆ ನಡೆದ ಹಲವು ಘಟನೆಗಳನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಫಜಲಪುರ ಪೊಲೀಸ್ ಠಾಣೆಯಿಂದ ಅತ್ಯಾಚಾರ ಪ್ರಕರಣದ ಆರೋಪಿ ಪರಾರಿಯಾದ ಘಟನೆ, ಚಿತ್ತಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಅವ್ಯವಸ್ಥೆ, ಅಕ್ರಮ ಪಡಿತರ ಸಾಗಣೆ, ಮರಳು ದಂಧೆ, ಮಾದಕ ವಸ್ತುಗಳ ಅಕ್ರಮ ಚಟುವಟಿಕೆ, ಜೂಜಾಟ ಹಾಗೂ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದ್ದು, ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಭಿವೃದ್ಧಿ ಕಾಮಗಾರಿಗಳಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಪ್ರಬುದ್ಧ ಅಕಾಡೆಮಿ ಕಟ್ಟಡ ಕುಸಿತ, ಮಹಿಳಾ ಕಾಲೇಜು ಕಟ್ಟಡದ ಘಟನೆ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಅವರು ಆರೋಪಿಸಿದರು.