ಕಲಬುರಗಿ: ಕಳೆದ ಹಲವು ವರ್ಷಗಳಿಂದ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿಗಾಗಿ ಕಾಯುತ್ತಿದ್ದ ಅರ್ಹ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಿದೆ. ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತರು ನವೆಂಬರ್ 23ರಂದು ಬಡ್ತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಥಳ ಆಯ್ಕೆ ಕೌನ್ಸೆಲಿಂಗ್ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.

ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಕುರಿತು ಶಿಕ್ಷಕರು ಎದುರಿಸುತ್ತಿದ್ದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು, ಶಿಕ್ಷಕರ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದರು. ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಬಡ್ತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದರು.

ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಇಲಾಖಾ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು. ಈ ಪ್ರಯತ್ನಗಳ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಆದೇಶ ಹೊರಡಿಸಲಾಗಿದ್ದು, ನವೆಂಬರ್ 23ರಂದು ಬೆಳಿಗ್ಗೆ 11.30ಕ್ಕೆ ಕಲಬುರಗಿಯ ಕ್ಷೇತ್ರ ಆಯುಕ್ತರ ಕಚೇರಿಯಲ್ಲಿ ಸ್ಥಳ ಆಯ್ಕೆ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿದೆ.

ಶಿಕ್ಷಕರ ಸಮಸ್ಯೆಗಳನ್ನು ಆಲಿಸುವುದಷ್ಟೇ ಅಲ್ಲದೆ, ಅವುಗಳ ಪರಿಹಾರಕ್ಕಾಗಿ ನಿರಂತರ ಪ್ರಯತ್ನ ನಡೆಸುವುದು ತಮ್ಮ ಆದ್ಯತೆಯಾಗಿದೆ. ಶಿಕ್ಷಕರ ಹಿತಾಸಕ್ತಿ ಹಾಗೂ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸದಾ ಬದ್ಧನಾಗಿದ್ದೇನೆ ಎಂದು ಶಶೀಲ್ ಜಿ. ನಮೋಶಿ ತಿಳಿಸಿದ್ದಾರೆ.

ಬಡ್ತಿ ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಲು ಸ್ಪಂದಿಸಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲಿರುವ ಎಲ್ಲ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿದ್ದ ಅರ್ಹ ಶಿಕ್ಷಕರಲ್ಲಿ ಈ ಬೆಳವಣಿಗೆ ಹೊಸ ನಿರೀಕ್ಷೆ ಮೂಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ