×
Ad

ಕಲಬುರಗಿ | ಅ.30ರಂದು ನಡೆಯುವ ಸಭೆಯಲ್ಲಿ ವಿಮಾನಗಳ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪ : ಸಂಸದ ರಾಧಾಕೃಷ್ಣ ದೊಡ್ಡಮನಿ

Update: 2025-10-23 22:18 IST

ಕಲಬುರಗಿ: ಕೇಂದ್ರದ ನಾಗರಿಕ ವಿಮಾನಯಾನ ಸಚಿವರ ಅಧ್ಯಕ್ಷತೆಯಲ್ಲಿ ಅ.30ರಂದು ಬೆಂಗಳೂರಿನಲ್ಲಿ ರಾಜ್ಯದ ಸಂಸದ‌ರ‌ ಸಭೆ ನಡೆಯಲಿದ್ದು,‌ ಅಲ್ಲಿ‌ ಕಲಬುರಗಿ ವಿಮಾನ‌ ನಿಲ್ದಾಣದಿಂದ ಸ್ಥಗಿತಗೊಂಡಿರುವ ವಿಮಾನಗಳ ಕಾರ್ಯಾಚರಣೆ ಮರು ಆರಂಭಿಸಲು ಪ್ರಸ್ತಾಪ ಮಾಡಲಾಗುವುದು ಎಂದು ಸಂಸದ ರಾಧಾಕೃಷ್ಣ ದೊಡ್ಡಮನಿ ಹೇಳಿದರು.

ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ನವೀಕರಣಗೊಂಡ ಕಲಬುರಗಿ ಲೋಕಸಭಾ ಸದಸ್ಯರ ನವೀಕೃತ ಕಚೇರಿಯ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕಾಏಕಿ ಇಲ್ಲಿ ವಿಮಾನಗಳ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದ್ದು, ಈ ಬಗ್ಗೆ ಸಭೆಯಲ್ಲಿ ಪ್ರಶ್ನಿಸಲಾಗುವುದು.‌ ಇನ್ನು ಈಗಾಗಲೆ ಈ ಕುರಿತು ಕೇಂದ್ರಕ್ಕೆ ಪತ್ರ ಬರೆದು ಗಮನ ಸೆಳೆಯಲಾಗಿದೆ ಎಂದರು.

ಕಲಬುರಗಿ-ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ ಸೇರಿದಂತೆ ಕೇಂದ್ರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ‌ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಿರಂತರ ಒತ್ತಡ ಕೆಲಸ‌ ಮಾಡಲಾಗುತ್ತಿದೆ ಎಂದು‌ ಸಂಸದರು ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಮಾತನಾಡಿ, ಸಂಸದರ ಕಚೇರಿ ಇಂದು ಉದ್ಘಾಟನೆಯಾಗಿದ್ದರಿಂದ ಸಾರ್ವಜನಿಕರು ಇಲ್ಲಿ ಸಂಸದರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ಸಾರ್ವಜನಿಕರ‌ ಸ್ನೇಹಿಯಾಗಿ ಕಚೇರಿ ಕಾರ್ಯನಿರ್ವಹಿಸಲಿದೆ ಎಂದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ನಿರಂತರ ಮಲತಾಯಿ ಧೋರಣೆ ಮಾಡುತ್ತಿದೆ. ಈ ಹಿಂದೆಯೂ ವಿಮಾನ ಸಂಚಾರ ಸ್ಥಗಿತಗೊಂಡಾಗ ಮರು ಕಾರ್ಯಾಚರಣೆಗೆ ಅಗ್ರಹಿಸಿದಾಗ ಶುರುವಾಗಿತ್ತು. ಇದೀಗ ಪುನಃ ದಿಢೀರಣೆ‌ ವಿಮಾನ ಸಂಚಾರ ಸ್ಥಗಿತಗೊಳಿಸಿದೆ. ಇದಲ್ಲದೆ ತೆರಿಗೆ ಹಂಚಿಕೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯ ಮುಂದುವರೆದಿದೆ ಎಂದರು.

ಶಾಸಕರಾದ ಎಂ.ವೈ. ಪಾಟೀಲ, ಅವರು ನವೀಕೃತ ಸಂಸದ ಕಚೇರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ಕಾಡಾ ಅಧ್ಯಕ್ಷ ಅಬ್ದುಲ್ ರಶೀದ್, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಗ್ಯಾರಂಟಿ ಅನುಷ್ಠಾನ ಜಿಲ್ಲಾ‌ ಸಮಿತಿಯ ಅಧ್ಯಕ್ಷೆ‌ ಚಂದ್ರಿಕಾ ಪರಮೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖನ್, ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್, ಡಿ.ಸಿ. ಬಿ.ಫೌಝಿಯಾ ತರನ್ನುಮ್, ಕೆ.ಕೆ.ಆರ್.ಟಿ.ಸಿ. ಎಂ.ಡಿ ಡಾ.ಬಿ.ಸುಶೀಲಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ ಸೇರಿದಂತೆ ಇತರೆ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News