ಕಲಬುರಗಿ| ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಪ್ರತಿಭಟನೆ
ಕಲಬುರಗಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಮಲ್ಲಿಕಾರ್ಜುನ ಖರ್ಗೆ ಅವರು ಆ.8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಭೆ ನಡೆಸಿದ ಸ್ಥಳವನ್ನು ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸದ ಮುಖಂಡರು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿರುವುದು ಅಸ್ಪೃಶ್ಯತೆ ಆಚರಣೆಯ ಪ್ರತೀಕವಾಗಿದೆ ಎಂದು ಆರೋಪಿಸಿದರು.
ದೇಶದ ಹಿರಿಯ ರಾಜಕಾರಣಿ, ದಲಿತ ಸಮುದಾಯದ ಗೌರವದ ಪ್ರತೀಕವಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಇಂತಹ ಕೃತ್ಯವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಅಸ್ಪೃಶ್ಯತೆ ನಿರ್ಮೂಲನೆಗಾಗಿ ನಡೆದ ಹೋರಾಟಗಳಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು.
ಭಾರತೀಯ ಸಂವಿಧಾನದ ಅನುಚ್ಛೇದ 17 ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ಅಸ್ಪೃಶ್ಯತೆ ಅಥವಾ ಜಾತಿ ಆಧಾರಿತ ತಾರತಮ್ಯವನ್ನು ಯಾವುದೇ ರೂಪದಲ್ಲೂ ಸಹಿಸಬಾರದು. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಂವಿಧಾನದ ಆಶಯಗಳನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಮಹೇಶ್ ಕೋಕಿಲೆ, ಸಾಯಬಣ್ಣ ಕೊಟನೂರ, ಆರ್.ಕೆ. ಹುಡುಗಿ, ದತ್ತಾತ್ರೇಯ ಇಕ್ಕಲಕಿ, ಲಕ್ಷ್ಮಣ ದಸ್ತಿ, ಮಹಾಂತೇಶ ನವಕಲ, ಅಜೀಜ್ ಐಕೂರ, ಸಿದ್ದಣ್ಣ, ಸೂರ್ಯಕಾಂತ ಆಜಾದಪುರ, ರಾಜಕುಮಾರ್, ರಾಮಣ್ಣ ಸೇರಿದಂತೆ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.