Kalaburagi | ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ ಆರೋಪಗಳಿಗೆ ನ್ಯಾಯಾಂಗ ತನಿಖೆ ನಡೆಸಲು ಆಗ್ರಹಿಸಿ ಪ್ರತಿಭಟನೆ
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಯಲ್ಲಿನ ಭ್ರಷ್ಟಾಚಾರದ ಆರೋಪಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಅಖಿಲ ಭಾರತ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ವತಿಯಿಂದ ಗುರುವಾರ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕೆಪಿಎಸ್‌ಸಿಯಲ್ಲಿ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ವಿಷಯ ತಜ್ಞರನ್ನು ಒಳಗೊಳ್ಳಬೇಕು. ಆಯೋಗದ ಎಲ್ಲಾ ಹಂತದ ಸಿಬ್ಬಂದಿಯನ್ನು ನಿಯಮಿತವಾಗಿ ವರ್ಗಾವಣೆ ಮಾಡುವ ಮೂಲಕ ಪಾರದರ್ಶಕತೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ಸಮಯಬದ್ಧ ಹಾಗೂ ಭ್ರಷ್ಟಾಚಾರಮುಕ್ತವಾಗಿ ನಡೆಸಬೇಕು. ಮಾಜಿ ಅಧಿಕಾರಿಯಾದ ಪಿ.ಸಿ. ಹೋಟಾ ಸಮಿತಿ ಶಿಫಾರಸು ಮಾಡಿದ ಆಡಳಿತಾತ್ಮಕ ಸುಧಾರಣೆಗಳನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೆ ತರಬೇಕು. ಉದ್ಯೋಗಾಕಾಂಕ್ಷಿಗಳ ಹಿತಾಸಕ್ತಿಯನ್ನು ರಕ್ಷಿಸಿ ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಎಂದು ಮನವಿ ಮಾಡಿದರು.
ಕೆಪಿಎಸ್‌ಸಿಯನ್ನು ಜನವಿಶ್ವಾಸ ಗಳಿಸುವ ಸ್ವತಂತ್ರ, ಪಾರದರ್ಶಕ ಹಾಗೂ ಉತ್ತರದಾಯಿ ಸಂಸ್ಥೆಯಾಗಿ ರೂಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಕೃಷಿ ಇಲಾಖೆ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಭೂಮಾಪಕರ ನೇಮಕಾತಿ ಪ್ರಕ್ರಿಯೆಯನ್ನು ಕೆಪಿಎಸ್‌ಸಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವರ್ಗಾಯಿಸಿರುವ ಹಿನ್ನೆಲೆಯಲ್ಲಿ, ಈ ಹುದ್ದೆಗಳಿಗೆ ಕೆಪಿಎಸ್‌ಸಿ ಈಗಾಗಲೇ ಅಭ್ಯರ್ಥಿಗಳಿಂದ ಸಂಗ್ರಹಿಸಿರುವ ಅರ್ಜಿ ಶುಲ್ಕವನ್ನು ಕೂಡಲೇ ಮರುಪಾವತಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಗನ್ನಾಥ ಎಸ್.ಎಚ್., ರಮೇಶ್ ದೇವಕರ, ಪ್ರಶಾಂತ್ ಹಾದಿಮನಿ, ತೇಜಸ್ ಆರ್. ಸೇರಿದಂತೆ ಹಲವರು ಭಾಗವಹಿಸಿದ್ದರು.