×
Ad

ಕಲಬುರಗಿ | 5 ತಿಂಗಳ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

Update: 2026-01-28 17:09 IST

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16 ರಿಂದ 20 ವರ್ಷಗಳ ಕಾಲ ಅಡುಗೆ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ, ದಿನಗೂಲಿ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಜಮಾಯಿಸಿದ ನೌಕರರು, ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಧರಣಿ ಸತ್ಯಾಗ್ರಹ ನಡೆಸಿದರು. ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಕನಿಷ್ಠ ವೇತನವೂ ಸಕಾಲಕ್ಕೆ ಸಿಗದೆ, ಇಲಾಖೆಯು ಕಾರ್ಮಿಕರ ಬದುಕಿನೊಂದಿಗೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಐದು ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ದುಸ್ತರವಾಗಿದ್ದು, ಅನೇಕ ನೌಕರರು ಸಾಲದ ಸುಳಿಗೆ ಸಿಲುಕಿದ್ದಾರೆ. ನೌಕರರ ಹಿತದೃಷ್ಟಿಯಿಂದ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಇತರೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಿನಗೂಲಿ ನೌಕರರ ಸಂಘದ ಮುಖಂಡರಾದ ದಶರಥ ಕಲಗುರ್ತಿ, ಅಣ್ಣರಾಯ ಜಾಡಿ, ಭೀಮಾಶಂಕರ್ ದಂಡೆ, ಮಹೇಶ್, ಮಲ್ಲಿಕಾರ್ಜುನ್, ಪುಂಡಲಿಕ, ಚಂದ್ರಶೇಖರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News