Kalaburagi | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ: ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲಬುರಗಿ ಅಭಿವೃದ್ಧಿ ಪರ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ನೀಟ್ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ನಡೆಯುವ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಘಟನೆಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇಂತಹ ಘಟನೆಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ನಿರಾಸೆ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರನ್ನು ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರಕರಣದಿಂದಾಗಿ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 25 ರೂ. ಲಕ್ಷ ಪರಿಹಾರಧನ ನೀಡಬೇಕು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಲೂಯಿಸ್ ಕೋರಿ, ಮಲ್ಲಿನಾಥ ಬಿರಾದಾರ, ಖಾಜಿ ರಿಜ್ವಾನ್ ಉರ್ ರೆಹಮಾನ್ ಸಿದ್ದಿಕಿ, ಸಯ್ಯದ್ ನಜೀರುದ್ದೀನ್ ಮುತ್ತವಲ್ಲಿ, ಶೇಖರ್ ಸಿಂಗ್, ಜಗನ್ನಾಥ ಸೂರ್ಯವಂಶಿ, ಮುಬೀನ್ ಅಹ್ಮದ್, ಮೌಲಾನಾ ನೂಹ್, ಫಾಸ್ಟರ್ ಮನಿ, ಚಂದ್ರಶೇಖರ್ ಮಡಿವಾಳ, ಮಹೆಬೂಬ್ ಶಾ, ಫಾಸ್ಟರ್ ಪಂಡಿತ್, ಡಾ. ಅಬ್ದುಲ್ ಬಾರಿ, ಆರಿಫ್, ಶಫೀಕ್ ಸೇರಿದಂತೆ ಸಮಿತಿಯ ಹಲವು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.