×
Ad

ಕಲಬುರಗಿ | ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಡಾ.ಗೌಸುದ್ದೀನ್ ತುಮಕೂರಕರ

Update: 2026-01-09 20:12 IST

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ, ಈ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದು ಜಾನಪದ ತಜ್ಞ ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಗೌಸುದ್ದೀನ್ ತುಮಕೂರಕರ್ ಹೇಳಿದರು.

ನಗರದ ಜಿಲಾನಾಬಾದ್‌ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶವು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಈ ಬಾರಿ ಕಲ್ಯಾಣ ಕರ್ನಾಟಕ ಭಾಗದ ಕಾಲೇಜುಗಳ ಫಲಿತಾಂಶವನ್ನು ಉತ್ತಮಪಡಿಸುವ ಜವಾಬ್ದಾರಿ ಆಯಾ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಮೇಲಿದೆ. ವಿದ್ಯಾರ್ಥಿಗಳು ಕೂಡ ಕಠಿಣ ಪರಿಶ್ರಮ ಪಟ್ಟು ಉತ್ತಮ ಅಂಕ ಗಳಿಸಬೇಕು. ಶಿಕ್ಷಣದ ಜೊತೆಗೆ ಜೀವನದಲ್ಲಿ ಸಂಸ್ಕಾರವನ್ನು ಮೈಗೂಡಿಸಿಕೊಳ್ಳುವುದು ಅನಿವಾರ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅನೇಕ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ಕೋಣೆಗಳು, ಶೌಚಾಲಯ ಹಾಗೂ ಉಪನ್ಯಾಸಕರ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಈ ಭಾಗದ ಜನಪ್ರತಿನಿಧಿಗಳು ವಿಶೇಷ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ದಶರಥ ರಾಠೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶೇಕ್ ಸಮ್ರೀನ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಧರ್ಮರಾಯ ಜವಳಿ, ಮಹ್ಮದ್ ಅಮ್ಜದ್, ಶಂಕರ ರುದ್ರವಾಡಿ, ಮಹೇಶ ದೇಶಪಾಂಡೆ ಹಾಗೂ ರಾಜಶೇಖರ ಮಿಣಜಿಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಮೇಶ ಮಾಡಿಯ್ಯಾಳಕರ್, ಸೋಮಶೇಖರ ಚವ್ಹಾಣ್, ಡಾ.ವಿಶ್ವನಾಥ ಹೊಸಮನಿ, ಜಮುನಾ ಟಿಳೆ, ನೀಲಮ್ಮ ಪಾಟೀಲ್, ರೇಷ್ಮಾ ಖಾತೂನ್, ಸುಜಾತ ರೆಡ್ಡಿ, ಇಂದುಕಲಾ, ಸಂಗೀತಾ ಬುಳ್ಳಾ, ಬಾಬುರಾವ್ ಮೆಲಕೇರಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News