×
Ad

ಕಲಬುರಗಿ | ಲೋಕಸೇವಾ ಆಯೋಗದಿಂದ ಗ್ರೂಪ್ ‘ಬಿ’ ಹುದ್ದೆಗೆ ನೇಮಕಾತಿ ಪರೀಕ್ಷೆ

Update: 2025-02-22 19:40 IST

ಕಲಬುರಗಿ : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯಲ್ಲಿನ ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗೆ ಇದೇ ಫೆ.23 ರಿಂದ 28ರವರೆಗೆ ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಸ್ಫರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಯಾವುದೇ ಕಪ್ಪು ಚುಕ್ಕೆಗೆ ಅವಕಾಶ ಮಾಡಿಕೊಡದೆ ಸುಸೂತ್ರವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು.

ಶನಿವಾರ ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಪರೀಕ್ಷೆ ಪಾರದರ್ಶಕವಾಗಿ ನಡೆಸಬೇಕು. ಯಾವುದೇ ರೀತಿಯ ನಕಲಿಗೆ ಇಲ್ಲಿ ಅವಕಾಶ ಇಲ್ಲ ಎಂದ ಅವರು, ಎಲ್ಲಾದರೂ ನಕಲು ಪ್ರಕರಣ ವರದಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಫೆ.23 ರಂದು ನಡೆಯಲಿರುವ ಪರೀಕ್ಷೆಗೆ 35 ಪರೀಕ್ಷಾ ಕೇಂದ್ರದಲ್ಲಿ 11,535 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಅದೇ ರೀತಿ ಫೆ.24, 25 ಹಾಗೂ 27 ರಂದು ಪ್ರತಿ ದಿನ 12 ಕೇಂದ್ರದಲ್ಲಿ 3,745 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷೆ ಸುಗಮವಾಗಿ ನಡೆಯುವ ಸಂಬಂಧ ಈಗಾಗಲೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷೆ ನಡೆಯುವ ಮುನ್ನವೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಇರುವುದನ್ನು ಕೇಂದ್ರದ ಮುಖ್ಯಸ್ಥರು ಖಾತ್ರಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆಗೆ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಮೊಬೈಲ್ ಬ್ಯಾನ್, ಸಿಸಿಟಿವಿ. ಕಣ್ಗಾವಲಿನಲ್ಲಿ ಪರೀಕ್ಷೆ :

ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಕೇಂದ್ರದಿಂದ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷೆ ಮೇಲ್ವಿಚಾರಣೆ ಮಾಡಲಾಗುತ್ತದೆ. ಇನ್ನು ಡ್ರೆಸ್ ಕೋಡ್ ಕುರಿತಂತೆ ಪ್ರವೇಶ ಪತ್ರದಲಿಲ್ಲಿ ಮಾಹಿತಿ ನೀಡಿದ್ದು, ಅದನ್ನು ಎಲ್ಲಾ ಅಭ್ಯರ್ಥಿಗಳು ಪಾಲಿಸಬೇಕು ಎಂದು ಡಿಸಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ, ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News