Kalaburagi | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Update: 2026-08-18 18:38 IST

ಕಲಬುರಗಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಹೋಮ-ಹವನ ನಡೆಸಿ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿರುವ ಆರೋಪದ ಘಟನೆ ಖಂಡನೀಯವಾಗಿದೆ. ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಂಚಾಲಕ ಅರ್ಜುನ್ ಭದ್ರೆ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಿಂದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಪ್ರಸ್ತುತ ಮೂರನೇ ಅವಧಿಯಲ್ಲಿ ಮುಂದುವರಿದಿದೆ. ದೇಶದ ಸಂವಿಧಾನಿಕ ಪ್ರಜಾಪ್ರಭುತ್ವದ ಸಂಸ್ಥೆಗಳು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯ, ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಆಡಳಿತಾತ್ಮಕ ನಿಯಮಗಳಿಗೆ ಧಕ್ಕೆ ತರುವ ಬೆಳವಣಿಗೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮ, ರೈತರ ಹೋರಾಟ ಹಾಗೂ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಸೇರಿದಂತೆ ವಿವಿಧ ಜನಪರ ವಿಚಾರಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಜನವಿರೋಧಿ ನೀತಿಗಳ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿರುವ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸ್ಥಳವನ್ನು ‘ಶುದ್ಧೀಕರಿಸಿರುವುದು’ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಭದ್ರೆ ಹೇಳಿದರು.

ಖರ್ಗೆ ಅವರು ಭಾಷಣ ಮಾಡಿದ ಸ್ಥಳದಲ್ಲಿ ಹೋಮ-ಹವನ ನಡೆಸಿ ಗಂಗಾಜಲ ಸಿಂಪಡಿಸಿರುವುದು ಜಾತೀಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಇಂತಹ ಕೃತ್ಯಗಳು ಸಂವಿಧಾನದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿವೆ. ಇದರಿಂದ ದಲಿತ ಸಮುದಾಯಕ್ಕೆ ನೋವುಂಟಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಈ ಘಟನೆಗಾಗಿ ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ, ಆರೆಸ್ಸೆಸ್‌ ಹಾಗೂ ಸಂಘಪರಿವಾರದ ‘ಹಿಂದೂ ರಾಷ್ಟ್ರ’ದ ಪರಿಕಲ್ಪನೆಯು ದೇಶದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಸಾಧ್ಯತೆಯಿದೆ. ಇಂತಹ ವಿಭಜಕ ಚಿಂತನೆಗಳನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ವಿರೋಧಿಸಬೇಕಾಗಿದೆ ಎಂದರು.

ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಆಗಸ್ಟ್ 20ರಂದು ಕಲಬುರಗಿ ನಗರದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ. ಧರಣಿಯಲ್ಲಿ ಪ್ರಗತಿಪರ ಚಿಂತಕರು, ದಲಿತ ಸಮುದಾಯದ ಮುಖಂಡರು, ಹಿರಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಸೂರ್ಯಕಾಂತ ಅಜಾದಪೂರ, ಮಲ್ಲಿಕಾರ್ಜುನ ಖನ್ನಾ, ಮಹೇಶ್ ಕೋಕಿಲೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News