Kalaburagi | ಆಳಂದ ಕ್ಷೇತ್ರಕ್ಕೆ ಸಚಿವ ಸ್ಥಾನ ಅಥವಾ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಲು ರಮೇಶ ಜಗತಿ ಒತ್ತಾಯ
ಕಲಬುರಗಿ, ಆ.5: ಗಡಿನಾಡು ಪ್ರದೇಶವಾಗಿರುವ ಆಳಂದ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ಅಥವಾ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ನಮ್ಮ ಕರ್ನಾಟಕ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ ಜಗತ್ತಿ ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಳಂದ ತಾಲೂಕು ಮಹಾರಾಷ್ಟ್ರ ಗಡಿಯಲ್ಲಿರುವ ಕಲ್ಯಾಣ ಕರ್ನಾಟಕದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಸ್ವಾತಂತ್ರ್ಯಾನಂತರ ಇಂದಿನವರೆಗೂ ಈ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯದಿರುವುದು ಜನತೆಗೆ ಆಗಿರುವ ಅನ್ಯಾಯ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನ ಇಲ್ಲದ ಕಾರಣ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕ್ಷೇತ್ರಕ್ಕೆ ಸಮರ್ಪಕ ಆದ್ಯತೆ ಸಿಗದೆ, ರಸ್ತೆ, ನೀರಾವರಿ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದೆ. ಗಡಿನಾಡಿನಲ್ಲಿ ಕನ್ನಡದ ಉಳಿವು ಹಾಗೂ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅವರಿಗೆ ಸಚಿವ ಸ್ಥಾನ ಅಥವಾ ಪರ್ಯಾಯವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದಲ್ಲದೆ, ಆಳಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಿ, ಗಡಿನಾಡಿನ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸರ್ಕಾರ ಈ ನ್ಯಾಯಸಮ್ಮತ ಬೇಡಿಕೆಯನ್ನು ನಿರ್ಲಕ್ಷಿಸಿದರೆ, ಕ್ಷೇತ್ರದ ಜನರನ್ನು ಸಂಘಟಿಸಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರಮೇಶ್ ಜಗತ್ತಿ ಎಚ್ಚರಿಕೆ ನೀಡಿದ್ದಾರೆ.