×
Ad

Kalaburagi | ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು

ಬಾಲ್ಯ ವಿವಾಹ ಮಾಡಿಸಿದ್ದ ಪೋಷಕರು ಸೇರಿ ಮೂವರಿಗೆ ತಲಾ ಒಂದು ವರ್ಷ ಶಿಕ್ಷೆ

Update: 2026-07-09 22:34 IST

ಸಾಂದರ್ಭಿಕ ಚಿತ್ರ

ಕಲಬುರಗಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿರುವ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ, ಬಾಲ್ಯ ವಿವಾಹ ಮಾಡಿಸಿದ್ದ ಬಾಲಕಿಯ ಪೋಷಕರು ಹಾಗೂ ಮತ್ತೊಬ್ಬ ಆರೋಪಿಗೂ ತಲಾ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಯಾದಗಿರಿ ಜಿಲ್ಲೆಯ ಗ್ರಾಮವೊಂದರ ನಿವಾಸಿ ನಾಗಪ್ಪ ಚಡಬಾನೂರ (24) ಶಿಕ್ಷೆಗೆ ಗುರಿಯಾದ ಆರೋಪಿ.

ಪ್ರಕರಣದ ವಿವರದಂತೆ, ಆರೋಪಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಬಾಲಕಿಯ ಕುಟುಂಬಸ್ಥರು ಪ್ರಶ್ನಿಸಿದಾಗ ಜೀವ ಬೆದರಿಕೆ ಹಾಕಿದ್ದಾನೆ. ನಂತರ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಬಾಲ್ಯ ವಿವಾಹ ನಡೆಸಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ನಡೆಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ವಿವಿಧ ಕಲಂಗಳಡಿ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ವಿಶೇಷ ಪೋಕ್ಸೋ ನ್ಯಾಯಾಲಯ–ಎಫ್‌ಟಿಎಸ್‌ಸಿ-1) ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು, ಪೋಕ್ಸೋ ಕಾಯ್ದೆಯ ಕಲಂ 6ರಡಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದರು. ಜೊತೆಗೆ ಇತರೆ ಅಪರಾಧಗಳಿಗೂ ಪ್ರತ್ಯೇಕ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.

ಬಾಲ್ಯ ವಿವಾಹ ಪ್ರಕರಣಕ್ಕೂ ಶಿಕ್ಷೆ :

ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಆರೋಪಿ ಸಿದ್ದಪ್ಪ ಹರಕಂಚಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಅಪ್ರಾಪ್ತೆಯ ತಂದೆ ಮತ್ತು ತಾಯಿ ಮಗಳ ಬಾಲ್ಯ ವಿವಾಹಕ್ಕೆ ಕಾರಣರಾಗಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೂ ತಲಾ ಒಂದು ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News