Kalaburagi | ಬಸವೇಶ್ವರರ ವಿರುದ್ಧ ರವಿ ಹಂಜ್ ಅವಹೇಳನಕಾರಿ ಹೇಳಿಕೆ ಖಂಡನೀಯ: ಶಾಂತರೆಡ್ಡಿ ಪೇಟಶಿರೂರ
ಕಲಬುರಗಿ: ಜಗಜ್ಯೋತಿ ಬಸವೇಶ್ವರರ ವಿರುದ್ಧ ರವಿ ಹಂಜ್ ಅವರು ವ್ಯಕ್ತಪಡಿಸಿರುವ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕಲಬುರಗಿ ನಗರ ಯುವ ಘಟಕದ ಅಧ್ಯಕ್ಷ ಶಾಂತರೆಡ್ಡಿ ಪೇಟಶಿರೂರ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರವಿ ಹಂಜ್ ಅವರ ಹೇಳಿಕೆಗಳು ಸಮುದಾಯದ ಭಾವನೆಗಳಿಗೆ ನೋವುಂಟುಮಾಡಿದ್ದು, ಸಮುದಾಯದ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಿವೆ. ಇಂತಹ ಹೇಳಿಕೆಗಳನ್ನು ಯಾವುದೇ ರೀತಿಯಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಮುದಾಯದ ಹಿರಿಯರು, ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ನಿಂದಿಸುವುದು ಅಥವಾ ಅವಹೇಳನ ಮಾಡುವುದು ಸರಿಯಾದ ಕ್ರಮವಲ್ಲ. ಸಮಾಜದಲ್ಲಿ ಪರಸ್ಪರ ಗೌರವ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರವಿ ಹಂಜ್ ಅವರು ಸಮಾಜದ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳಿಂದ ದೂರವಿದ್ದು, ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.