ಕಲಬುರಗಿ: ಕಲಬುರಗಿ ತಾಲೂಕಿನ ಕೋಟನೂರಿನ ಸೇಂಟ್ ಮೇರಿ ಶಾಲೆಯಲ್ಲಿ ಮಂಗಳವಾರ ‘ವಿಜ್ಞಾನದ ಮಾಯಾಜಾಲ’ ಶೀರ್ಷಿಕೆಯಡಿ ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಹಾಗೂ ನವೀನ ಆಲೋಚನೆಗಳನ್ನು ಬೆಳೆಸುವ ಉದ್ದೇಶದಿಂದ ಈ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂದನೀಯ ಫಾದರ್ ಸಂತೋಷ್ ಬಾಪು ವಹಿಸಿದ್ದರು. ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ್ ಜಮಖಂಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಂದಿಕೂರ ಕ್ಲಸ್ಟರ್‌ನ ಸಿಆರ್‌ಪಿ ಶಿವಕುಮಾರ್ ಬಿರಾದಾರ್, ಅಂಬರೀಶ್ ಪಾಟೀಲ್, ಸುಧಾಕರ್ ಪಾಟೀಲ್, ಇಸಿಒ, ವಲಯದ ಇಸಿಒ ಗುರುಶಾಂತಲಿಂಗಯ್ಯ, ಕಾಂಗ್ರೆಸ್ ಯುವ ಮುಖಂಡ ದಿನೇಶ್ ದೊಡ್ಮನಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ನತಾಲಿಯಾ ಬರೇಟೋ ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿನಿಯರಾದ ಅನುಷ್ಕಾ ಹಾಗೂ ಅರ್ಚಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ವ್ಯವಸ್ಥಾಪಕರಾದ ಫಾದರ್ ಸ್ಟೀವನ್ ಪ್ರಕಾಶ್ ವೀಗಾಸ್ ಗಣ್ಯರನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳು ಸಿದ್ಧಪಡಿಸಿದ 40ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು, ಕಾರ್ಯನಿರ್ವಹಣಾ ಮಾದರಿಗಳು ಹಾಗೂ ರಂಗೋಲಿಯಲ್ಲಿ ಬಿಡಿಸಿದ ವಿಜ್ಞಾನ ಚಿತ್ರಗಳು ವಸ್ತುಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದ್ದವು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಕೌಶಲ್ಯ, ಸೃಜನಶೀಲತೆ ಹಾಗೂ ಪ್ರಾಯೋಗಿಕ ಚಿಂತನೆಗಳನ್ನು ಮಾದರಿಗಳ ಮೂಲಕ ಉತ್ಸಾಹದಿಂದ ಪ್ರದರ್ಶಿಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ್ ಜಮಖಂಡಿ, ಇದು ಕೃತಕ ಬುದ್ಧಿಮತ್ತೆಯ (ಎಐ) ಯುಗವಾಗಿದ್ದು, ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಜ್ಞಾನ ಹಾಗೂ ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಫಾದರ್ ಸಂತೋಷ್ ಬಾಪು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೃಜನಶೀಲತೆ (Creativity), ವಿಮರ್ಶಾತ್ಮಕ ಚಿಂತನೆ (Critical Thinking), ಪ್ರಜ್ಞೆ (Consciousness) ಹಾಗೂ ಕುತೂಹಲ (Curiosity)ಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತರಾಗದೆ, ಹೊಸ ಆಲೋಚನೆಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಬೇಕು ಎಂದು ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಗಣ್ಯರು ಪ್ರಶಂಸಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಕ್ರಿಯ ಭಾಗವಹಿಸುವಿಕೆಯಿಂದ ವಿಜ್ಞಾನ ವಸ್ತುಪ್ರದರ್ಶನ ಯಶಸ್ವಿಯಾಗಿ ನಡೆಯಿತು. ಪಠ್ಯಾಧಾರಿತ ಕಲಿಕೆಯ ಜೊತೆಗೆ ಅನುಭವಾಧಾರಿತ ಕಲಿಕೆಯ ಮಹತ್ವವನ್ನು ಈ ಪ್ರದರ್ಶನ ಮತ್ತೊಮ್ಮೆ ಸಾರಿತು. ಕೊನೆಯಲ್ಲಿ ವಿದ್ಯಾರ್ಥಿನಿ ಅನುಷ್ಕಾ ವಂದನಾರ್ಪಣೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ