×
Ad

ಕಲಬುರಗಿ | ಕಳವಾಗಿದ್ದ 12.5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನ ಜಪ್ತಿ, ಇಬ್ಬರ ಬಂಧನ : ಎಸ್ಪಿ ಅಡ್ಡೂರು ಶ್ರೀನಿವಾಸಲು

Update: 2026-01-02 15:21 IST

ನಾಗೇಶ್, ಗೌಡಪ್ಪ

ಕಲಬುರಗಿ : ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾಗಿದ್ದ ಸುಮಾರು 12.5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ನಗರದ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂಚೋಳಿ ತಾಲೂಕಿನ ಪಸ್ತಾಪುರ ಗ್ರಾಮದ ನಾಗೇಶ್ ರಾಜಪ್ಪ ಹಲಗೆನೂರ ಹಾಗೂ ಜೇವರ್ಗಿ ತಾಲೂಕಿನ ರಾಮಪುರ ಗ್ರಾಮದ ಗೌಡಪ್ಪ ಶರಣಪ್ಪ ಕಕ್ಕಸಗೇರಾ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ತಿಳಿಸಿದರು.

ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಹೆಬ್ಬಾಳ ಗ್ರಾಮದ ಬಸವರಾಜ ಅಂಕಲಗಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಸಿಪಿಐ ಜಗದೇವಪ್ಪ ಪಾಳಾ ನೇತೃತ್ವದಲ್ಲಿ ಕಾಳಗಿ ಪಿಎಸ್ಐ ತಿಮ್ಮಯ್ಯ ಹಾಗೂ ಇತರ ಸಿಬ್ಬಂದಿಗಳನ್ನೊಳಗೊಂಡ ತನಿಖಾ ತಂಡ ರಚಿಸಿ, ಆರೋಪಿಗಳನ್ನು ವಶಕ್ಕೆ ಪಡೆದು, 14 ಬೈಕ್ ಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.

ಬಂಧಿತ ಆರೋಪಿಗಳು, ಜಾತ್ರೆ, ಹೆಚ್ಚಿನ ಪಾರ್ಕಿಂಗ್ ವುಳ್ಳ ಸ್ಥಳಗಳನ್ನು ಗುರಿಯಾಗಿಸಿ ಐಷಾರಾಮಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು. ಈ ಕುರಿತು ವಿಚಾರಿಸಿದಾಗ ಆರೋಪಿಗಳಿಬ್ಬರೂ ಕಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ, ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಿಎಸ್ಐ ಗೌತಮ, ಸಿದ್ಧಲಿಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News