ಕಲಬುರಗಿ: ತಾಲೂಕಿನ ಜಂಬಗಾ(ಬಿ) ಗ್ರಾಮದಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕ್ಷೇತ್ರ ವ್ಯಾಪ್ತಿಯ ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಂಬಗಾ(ಬಿ) ಗ್ರಾಮದಲ್ಲಿ ಚರಂಡಿಗಳು ತುಂಬಿ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದ ರಸ್ತೆ ಯಾವುದು, ಚರಂಡಿ ಯಾವುದು ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಕೊಳಚೆ ನೀರಿನಲ್ಲೇ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

ಇನ್ನೊಂದೆಡೆ ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿ ಗ್ರಾಮಸ್ಥರು ಹೈರಾಣಾಗಿದ್ದಾರೆ. ಸಂಜೆ ಐದು ಗಂಟೆಯಾಗುತ್ತಿದ್ದಂತೆ ಮನೆ ಮುಂದೆ ಕುಳಿತುಕೊಳ್ಳಲು ಅಥವಾ ನಿಲ್ಲಲು ಸಾಧ್ಯವಾಗದಷ್ಟು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಮಕ್ಕಳು ಹಾಗೂ ವಯೋವೃದ್ಧರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ.

ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಮಸ್ಯೆ ಬಗೆಹರಿಸುವಲ್ಲಿ ಪಂಚಾಯಿತಿ ಆಡಳಿತ ನಿರ್ಲಕ್ಷ್ಯ ವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಗ್ರಾಮದ ಚರಂಡಿ ಸಮಸ್ಯೆ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಈವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ, ಕೊಳಚೆ ನೀರು ರಸ್ತೆಯ ಮೇಲೆ ಹರಿಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸೊಳ್ಳೆಗಳ ಹಾವಳಿ ನಿಯಂತ್ರಿಸಲು ಔಷಧ ಸಿಂಪಡಣೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor