×
Ad

Kalaburagi | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಜೈಲು

Update: 2026-07-01 17:57 IST

ಸಾಂದರ್ಭಿಕ ಚಿತ್ರ (AI)

ಕಲಬುರಗಿ : ಅಪ್ರಾಪ್ತ ಬಾಲಕಿಯೊಂದಿಗೆ ಬಾಲ್ಯ ವಿವಾಹ ಮಾಡಿಕೊಂಡು, ಆಕೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಬಾಬು ಮುಲ್ಲಾ (27) ಶಿಕ್ಷೆಗೆ ಗುರಿಯಾದ ಆರೋಪಿ.

2023ರ ಮಾರ್ಚ್ 5ರಂದು ಈತ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದು, ಅದೇ ರಾತ್ರಿ ಅತ್ಯಾಚಾರ ಎಸಗಿದ್ದ. ನಂತರವೂ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿ 2024ರ ಸೆಪ್ಟೆಂಬರ್ 18ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.

ಗರ್ಭಿಣಿಯಾಗಿದ್ದ ವೇಳೆ ತಾಯಿ ಕಾರ್ಡ್ ಪಡೆಯಲು ಸಲ್ಲಿಸಿದ ದಾಖಲೆಗಳಿಂದ ಬಾಲಕಿ ಅಪ್ರಾಪ್ತ ವಯಸ್ಸಿನವಳು ಎಂಬುದು ಬೆಳಕಿಗೆ ಬಂದಿತ್ತು. ಈ ಮಾಹಿತಿ ಆಧರಿಸಿ ಆಶಾ ಕಾರ್ಯಕರ್ತೆ ನರೋಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆಯಲ್ಲಿ ಬಾಲ್ಯ ವಿವಾಹ ಹಾಗೂ ಲೈಂಗಿಕ ದೌರ್ಜನ್ಯ ದೃಢಪಟ್ಟ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ವಿವಿಧ ಕಲಂಗಳಡಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಬಾಲ್ಯ ವಿವಾಹಕ್ಕೆ ಸಹಕರಿಸಿದ ಆರೋಪದಡಿ ಕುಟುಂಬದ ಇತರ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

ಜೊತೆಗೆ, ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಒಂದು ತಿಂಗಳೊಳಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News