ಕಲಬುರಗಿ : ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಜೋಡಣೆ ಮಾಡುವ ಹಾಗೂ ಕೆಪಿಎಸ್‌ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರದ ಪ್ರಸ್ತಾವನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಯೋಜನೆಯಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗಲಿದ್ದು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮುಚ್ಚುವ ಆತಂಕವಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ಯೋಜನೆಯನ್ನು ಹಿಂಪಡೆಯಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷೆ ಸುಜಾತ ವೈ. ಮತ್ತು ಜಿಲ್ಲಾ ಕಾರ್ಯದರ್ಶಿ ಇಮಾಮಸಾಬ್ ನದಾಫ್ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 2015-16ರಲ್ಲಿ 47.1 ಲಕ್ಷ ಇದ್ದದ್ದು, 2025-26ರಲ್ಲಿ 38.2 ಲಕ್ಷಕ್ಕೆ ಇಳಿಕೆಯಾಗಿದೆ. ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ, ಶಿಕ್ಷಕರ ಅಭಾವ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ದಾಖಲಾತಿ ಕುಸಿತಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇದ್ದು, ಕಾಯಂ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿದೆ. ಅತಿಥಿ ಶಿಕ್ಷಕರ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ನಿರ್ವಹಿಸಲಾಗುತ್ತಿದೆ. ಇನ್ನೊಂದೆಡೆ, ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ, ಪಠ್ಯಪುಸ್ತಕ ಹಾಗೂ ಗುಣಮಟ್ಟದ ಬೋಧನೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

ಕೆಪಿಎಸ್‌ ಯೋಜನೆಯಡಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ಒದಗಿಸಲು ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನಿಂದ (ಎಡಿಬಿ) ₹2,500 ಕೋಟಿ ಸಾಲ ಪಡೆಯುವ ಹಾಗೂ ಸಿಎಸ್‌ಆರ್‌ ನಿಧಿಯಡಿ 500 ಹೊಸ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಸರ್ಕಾರ ಘೋಷಿಸಿತ್ತು. ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ತೆರೆಯುವ ಭರವಸೆಯನ್ನೂ ನೀಡಿತ್ತು. ಆದರೆ, ಹೊಸ ಶಾಲೆಗಳನ್ನು ಆರಂಭಿಸುವ ಬದಲು ಈಗಿರುವ ಶಾಲೆಗಳನ್ನೇ ವಿಲೀನಗೊಳಿಸುವ ಪ್ರಸ್ತಾವನೆ ಮುಂದಿಟ್ಟಿರುವುದು ಗ್ರಾಮೀಣ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಆರರಿಂದ 14 ವರ್ಷದ ಮಕ್ಕಳಿಗೆ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸಂವಿಧಾನದ ಅನುಚ್ಛೇದ 21ಎ ಹಾಗೂ ಶಿಕ್ಷಣ ಹಕ್ಕು ಕಾಯ್ದೆ ಖಾತರಿಪಡಿಸಿವೆ. ಹೀಗಾಗಿ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಕ್ರಮವನ್ನು ಕೈಬಿಟ್ಟು, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor